![building-bangalore-collapse](http://kannada.vartamitra.com/wp-content/uploads/2018/02/building-bangalore-collapse.jpg)
ಬೆಂಗಳೂರು:ಫೆ-15: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದಾಗಿ ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಮೇಯರ್, ಕಟ್ಟಡದ ಅವಶೇಷಗಳಡಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಇದುವರೆಗೆ ಏಳು ಜನರನ್ನು ಅವಶೇಷಗಳಡಿಯಿಂದ ರಕ್ಷಿಸಿ ಆಸ್ಪ್ರತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ರಫೀಕ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಈ ಕಟ್ಟಡ ಐದು ವರ್ಷದ ಹಿಂದಿನದ್ದಾಗಿದ್ದು, ಕಟ್ಟಡದಲ್ಲಿ ಮೂರು ಫ್ಲೋರ್ ನಿರ್ಮಾಣ ಮಾಡಲಾಗಿತ್ತು. ಇದೀಗ ಹಳೆಯ ಕಟ್ಟಡದ ಮೇಲೆ ಮತ್ತೆ ಎರಡು ಫ್ಲೋರ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಪಾಯದ ನಿರ್ಮಾಣ ಸಮರ್ಪಕವಿಲ್ಲದಿರುವುದರಿಂದ ಈ ದುರ್ಘಟನೆ ನಡೆದಿದೆ ಎಂದಿದ್ದಾರೆ.
ಮೃತ ಕುಟುಂಬಗಳಿಗೆ ಪರಿಹಾರ
ಘಟನೆ ಕುರಿತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ತಲಾ 5ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯ ಭರವಸೆ ನೀಡಿದ್ದಾರೆ. ಅಲ್ಲದೆ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.