ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಸಾವು

ಬೆಂಗಳೂರು:ಫೆ-15: ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಡೆದಿದೆ.

 

ಮಧ್ಯಾಹ್ನ 4:30ರ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎಂಟು ಕಾರ್ಮಿಕರನ್ನು ರಕ್ಷಿಸಿದ್ದು, ಇನ್ನು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

 

ಅವಶೇಷಗಳಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು ಓರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತ ಕಾರ್ಮಿಕರು ಬಿಹಾರ ಮೂಲದವರಾಗಿದ್ದು, ರಾಜು, ಮದಿನ, ಮೊಹರಮ್ ಎಂದು ಗುರುತಿಸಲಾಗಿದೆ.

 

ವಸತಿಗಾಗಿ ಈ ಐದು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಬಳಿಕ ವಾಣಿಜ್ಯ ಬಳಕೆಗಾಗಿ ಕಟ್ಟಡ ನವೀಕರಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಭೇಟಿ ನೀಡಿದ್ದು, ಹಳೆ ಅಡಿಪಾಯದ ಮೇಲೆ ಮೂರು ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ