ಬೆಂಗಳೂರು, ಫೆ.16- ರಾಷ್ಟ್ರಕೂಟರ ಉತ್ಸವ ಬಹುಮನಿ ಉತ್ಸವವನ್ನು ಮಾ.4ರಂದು ಗುಲ್ಬರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಹುಮನಿ ಉತ್ಸವಕ್ಕೆ ಬಿಜೆಪಿ ಹಾಗೂ ಹಲವು ಸಂಘ-ಸಂಸ್ಥೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮತಗಳಿಕೆಗಾಗಿ ಎಂದೂ ಮಾಡದ ಈ ಉತ್ಸವವನ್ನು ಮಾಡಲಾಗುತ್ತಿದೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಹಾಳಾಗಿದ್ದು, ಬಹುಮನಿ ಉತ್ಸವದಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂಬ ತೀವ್ರ ಆರೋಪ ಕೇಳಿಬಂದಿತ್ತು.
ಅಲ್ಲದೆ, ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳು ಈ ವಿಷಯವನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಮುಂದಾಗಿದ್ದವು.
ಅಲ್ಲದೆ, ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲು ಸಜ್ಜಾಗಿತ್ತು. ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರಕೂಟರು ಹಾಗೂ ಬಹಮನಿ ಉತ್ಸವವನ್ನು ಆಚರಣೆ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಉತ್ಸವದ ಆಚರಣೆ ವಿಷಯ ನನಗೆ ಗೊತ್ತೇ ಇಲ್ಲ ಎಂದು ಹೇಳಿದ್ದರು.
ಈ ಎಲ್ಲ ಗೊಂದಲಗಳ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಗುಲ್ಬರ್ಗ ಉಸ್ತುವಾರಿ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಬಹುಮನಿ ಉತ್ಸವವನ್ನು ಸರ್ಕಾರದ ವತಿಯಿಂದ ಆಚರಿಸುವುದಿಲ್ಲ. ಖಾಸಗಿಯವರು ಮುಂದೆ ಬಂದರೆ ಪರಿಶೀಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
(ಪ್ರಾತಿನಿಧ್ಯಕ್ಕಾಗಿ ಮಾತ್ರ ಫೋಟೋವನ್ನು ಪೋಸ್ಟ್ ಮಾಡಲಾಗಿದೆ, ಮೂಲವಲ್ಲ)