ಜೆಡಿಎಸ್, ಬಿಎಸ್‍ಪಿ ಮೈತ್ರಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು, ಫೆ.18- ಜೆಡಿಎಸ್, ಬಿಎಸ್‍ಪಿ ಮೈತ್ರಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ಅವಧಿಗೂ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ದಲಿತರು ಸೇರಿದಂತೆ ಎಲ್ಲ ವರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಶೋಷಿತರು ಮತ್ತು ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು, ಸಾಮಾಜಿಕ ನ್ಯಾಯ ಪಾಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಹೀಗಾಗಿ ಬಿಎಸ್‍ಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಾಕ್ಷಣ ಕಾಂಗ್ರೆಸ್‍ಗೆ ಹಾನಿಯಾಗಲಿದೆ ಎಂಬ ವಾದ ಸರಿಯಲ್ಲ ಎಂದು ಹೇಳಿದರು.

ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿಯಿಂದಾಗಿ ದಲಿತರ ಮತಗಳು ವಿಭಜನೆಯಾಗಲಿದ್ದು, ಕಾಂಗ್ರೆಸ್‍ಗೆ ಹೊಡೆತ ಬೀಳಲಿದೆ ಎಂಬ ಅಂದಾಜುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಆದರೆ, ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‍ನಿಂದ ಚದುರಿ ಹೋಗುವುದಿಲ್ಲ ಎಂಬ ವಿಶ್ವಾಸದಲ್ಲಿರುವ ರಾಜ್ಯದ ಕಾಂಗ್ರೆಸ್ ನಾಯಕರು ಬಿಎಸ್‍ಪಿ ಮೈತ್ರಿಯಿಂದ ಮಹತ್ವದ ಪರಿಣಾಮವೇನೂ ಆಗುವುದಿಲ್ಲ ಎಂದು ವಾದಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅದಕ್ಕೆ ದನಿಗೂಡಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಹಿಂದಿನ ಯಾವ ಸರ್ಕಾರಗಳೂ ಪತ್ರಕರ್ತರ ಬೇಡಿಕೆಗಳನ್ನು ಪರಿಗಣಿಸಿರಲಿಲ್ಲ. ನಮ್ಮ ಸರ್ಕಾರ ಮಾಧ್ಯಮದವರನ್ನು ಗುರುತಿಸಿದೆ. ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಾಧ್ಯಮ ಸಂಜೀವಿನಿ, ರಾಜೀವ್ ಆರೋಗ್ಯ ಭಾಗ್ಯ, ಪತ್ರಿಕಾ ವಿತರಕರ ಕ್ಷೇಮನಿಧಿ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‍ಪಾಸ್ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ 1557 ಕೋಟಿ ರೂ. ವೆಚ್ಚದ 116 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಅವರು, 560 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡ 326 ಕಾಮಗಾರಿಗಳನ್ನು ಉದ್ಘಾಟನೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಂ.ರೇವಣ್ಣ, ಶಾಸಕ ಪ್ರತಾಪ್‍ಗೌಡ ಪಾಟೀಲ್, ಜಿಲ್ಲಾಧಿಕಾರಿ ಗೌತಮ್ ಬಗಾದಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಿರಾಮ್ ಶಂಕರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ