
ಬೆಂಗಳೂರು, ಫೆ.21-ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನ ಮುದುಗಲ್ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದೆ.
ಆಡಳಿತ ಪಕ್ಷದ ಶಾಸಕ ವಿಜಯಾನಂದ ಕಾಶಪ್ಪನವರ್ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿ ಅತ್ಯಂತ ಪ್ರಭಾವಿ ರಾಜಕಾರಣಿಯೊಬ್ಬರು ಸರ್ಕಾರಿ ಜಮೀನು, ದಲಿತರ ಜಮೀನುಗಳನ್ನು ಅತಿಕ್ರಮಣ ಮಾಡಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರ ಸಂಪೂರ್ಣ ತನಿಖೆ ಆಗಬೇಕೆಂದು ಒತ್ತಾಯಿಸಿದರು.
ಇದಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರ ಪರವಾಗಿ ಉತ್ತರ ನೀಡಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಅವರು, ಈಗಾಗಲೇ ತಪ್ಪಿತಸ್ಥರವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕಲ್ಲು ಗಣಿಗಾರಿಕೆಗಾಗಿ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡಿದ್ದರೆ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.