ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದರೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ನ ರಾಷ್ಟ್ರಾಧ್ಯಕ್ಷರು ರಾಜ್ಯದಲ್ಲಿ ಪ್ರವಾಸ ಚುರುಕುಗೊಳಿಸಿದ್ದಾರೆ. ಶನಿವಾರದಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡಲಿದ್ದಾರೆ.
ರಾಜ್ಯದ ಕರಾವಳಿ ಭಾಗದಲ್ಲಿ ಈಗಾಗಲೇ ಪ್ರವಾಸ ಕೈಗೊಂಡು ದೆಹಲಿಗೆ ವಾಪಸಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರದಿಂದ ಮತ್ತೆ ಮೂರು ದಿನಗಳ ಕಾಲ (ಫೆ. 24ರಿಂದ 26) ಉತ್ತರ ಕರ್ನಾಟಕ ಭಾಗದ ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂತೆಯೇ ಇದೇ ಅವಧಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಮುಂಬೈ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಭಯ ನಾಯಕರ ಉತ್ತರ ಕರ್ನಾಟಕ ಪ್ರವಾಸ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಪಾಲಿಗೆ ಮಹತ್ವದ್ದಾಗಿದೆ. ಅಲ್ಲದೆ, ಚುನಾವಣೆ ವೇಳೆ ಆ ಭಾಗದಲ್ಲಿ ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳಲೂ ಇದು ಅನುಕೂಲವಾಗಲಿದೆ. ಈ ಬೆನ್ನಿಗೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾ.6ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.