ಕಾವೇರಿ ನಿರ್ವಹಣಾ ಮಂಡಳಿ ರಚನೆ ಸುಲಭದ ಕೆಲಸವಲ್ಲ; ಕಾಲಾವಕಾಶದ ಅಗತ್ಯವಿದೆ: ಸುಪ್ರೀಂ ಗೆ ಕೇಂದ್ರ ಸರ್ಕಾರದ ಹೇಳಿಕೆ

ನವದೆಹಲಿ:ಫೆ-27: ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಷ್ಟು ಸುಲಭವಲ್ಲ; ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಕಾಲಾವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.

6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶಕ್ಕೆ ಉತ್ತರ ನೀಡಿರುವ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು, ಕಾವೇರಿ ವಿವಾದ ಸಂಬಂಧ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಗೌರವಿಸುತ್ತದೆ. ಅಂತೆಯೇ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಷ್ಟು ಸುಲಭದ ಕೆಲಸವಲ್ಲ. ಕರ್ನಾಟಕ, ತಮಿಳುನಾಡು ಕೇಂದ್ರದ ಎರಡು ಕಣ್ಣುಗಳಿದ್ದಂತೆ. ಇದನ್ನು ಗಮನದಲ್ಲಿಟ್ಟುಕೊಂಡು ನಿರ್ವಹಣಾ ಮಂಡಳಿ ರಚನೆ ಮಾಡಬೇಕಾಗುತ್ತದೆ. ಹೀಗಾಗಿ ನಿರ್ವಹಣಾ ಮಂಡಳಿ ರಚನೆಗೆ ಕಾಲಾವಕಾಶ ಬೇಕು ಎಂದು ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ.

ಇನ್ನು ಇತ್ತೀಚೆಗೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ತನ್ನ ಅಂತಿಮ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರನ್ನು ನೀಡಿತ್ತು. ಅಂತೆಯೇ ಬೆಂಗಳೂರಿಗಾಗಿ 4.5 ಟಿಎಂಸಿ ನೀರನ್ನು ಮೀಸಲಿಟ್ಟು ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡುವಂತೆಯೂ ಮತ್ತು ಕೇರಳ ಮತ್ತು ಪಾಂಡಿಚೇರಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿತ್ತು. ಅಲ್ಲದೆ ಇನ್ನು 6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅಲ್ಲದೇ ಈ ಬಗ್ಗೆ ಮತ್ತೆ ಕಾಲಾವಕಾಶ ಕೇಳದಂತೆ ಸೂಚನೆ ನೀಡಿತ್ತು.

Cauvery Verdict, Cauvery Management Board,Nitin Gadkari , Supreme Court

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ