ಬೆಂಗಳೂರು, ಫೆ.28- ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್ ಅವರು ಜನಪರ ಬಜೆಟ್ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ ಎಂದು ಮೇಯರ್ ಆರ್.ಸಂಪತ್ರಾಜ್ ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್ ಮಂಡನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್ನಲ್ಲಿ ಮಹಿಳೆ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳನ್ನೂ ಗಮನದಲ್ಲಿಟ್ಟುಕೊಂಡು ಉತ್ತಮ ಬಜೆಟ್ ಮಂಡನೆ ಮಾಡಲಾಗಿದೆ ಎಂದರು.
ಮೇಯರ್ ಹಾಗೂ ಕಮಿಷನರ್ ಅವರ ಮನೆಗಳು ಪಾಲಿಕೆ ವ್ಯಾಪ್ತಿಯಲ್ಲಿದ್ದರೆ ಸಾರ್ವಜನಿಕರಿಗೆ ಸುಲಭವಾಗಿ ಸಿಗಲಿದ್ದಾರೆ ಎಂಬ ಉದ್ದೇಶದಿಂದ ಪಾಲಿಕೆಯಲ್ಲೇ ಮನೆ ನಿರ್ಮಿಸಲು ತೀರ್ಮಾನಿಸಿದ್ದೇವೆ ಎಂದರು.
ಎರಡು ತಿಂಗಳ ಹಿಂದೆ ನಗರದಲ್ಲಿ ಸಾಕಷ್ಟು ಮಳೆಯಾದ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ಹೊಡೆತ ಬಿದ್ದಿತ್ತು. ಆದರೆ, ಈ ಬಾರಿ ತೆರಿಗೆ ಸಂಗ್ರಹಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.