ಬಿಜೆಪಿ ಮಹತ್ವದ ಸಭೆ

ಬಿಜೆಪಿ ಮಹತ್ವದ ಸಭೆ

ಬೆಂಗಳೂರು,ಮಾ.1- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಮಹಾನಗರದಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಲೇಬೇಕೆಂದು ತೀರ್ಮಾನಿಸಿರುವ ಬಿಜೆಪಿ ಇಂದು ಸಂಘಪರಿವಾರದ ಪ್ರಮುಖರೊಂದಿಗೆ ಮಹತ್ವದ ಸಭೆ ನಡೆಸಿತು.

ಬಸವನಗುಡಿಯ ಭಾರತೀಶೇಖರ್ ಕಲ್ಯಾಣಮಂಟಪದಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ಆರ್‍ಎಸ್‍ಎಸ್ ಪ್ರಾಂತ್ಯ ಕಾರ್ಯದರ್ಶಿ ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಆರ್.ಅಶೋಕ್, ಮುನಿರಾಜು, ರವಿಸುಬ್ರಹ್ಮಣ್ಯ, ಅಶ್ವಥ್ ನಾರಾಯಣ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಸಭೆಯಲ್ಲಿ ಪ್ರಮುಖವಾಗಿ ಇತ್ತೀಚೆಗೆ ನಗರದಲ್ಲಿ ನಡೆಯುತ್ತಿರುವ ಕಗ್ಗೊಲೆ ಕಾನೂನು ಸುವ್ಯವಸ್ಥೆ ಕುಸಿತ, ಹಿಂದೂ ಕಾರ್ಯಕರ್ತರ ಟಾರ್ಗೆಟ್, ಮಹಿಳೆಯರ ಮೇಲೆ ಹಲ್ಲೆ ಸೇರಿದಂತೆ ಮತ್ತಿತರ ಪ್ರಚಲಿತ ವಿದ್ಯಮಾನಗಳ ಬಗ್ಗೆ ಸಂಘದ ನಾಯಕರ ಜೊತೆ ಚರ್ಚೆ ನಡೆಸಲಾಯಿತು.

ಮಾ.2ರಿಂದ 15ರವರೆಗೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲು ಉದ್ದೇಶಿಸಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಜನರಲ್ಲಿ ಜನಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ.

ಜೊತೆಗೆ ಆಡಳಿತಾರೂಢ ಸರ್ಕಾರದ ವೈಫಲ್ಯಗಳು, ಇತ್ತೀಚೆಗೆ ಉದ್ಯಮಿ ಪುತ್ರನ ಮೇಲೆ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ನಡೆಸಿದ ಹಲ್ಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಎಲ್ಲದರ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕೆಂಬ ಸಲಹೆಯನ್ನು ನೀಡಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 2ರಿಂದ 3 ಸಾವಿರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಬೇಕು. ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಿರುವ ಹಗರಣಗಳು, ಕುಡಿಯುವ ನೀರಿನ ಸಮಸ್ಯೆ, ಮೂಲಭೂತ ಸೌಕರ್ಯಗಳ ಕೊರತೆ ವೈಟ್ ಟಾಪಿಂಗ್ ಹಗರಣ ಮುಂತಾದ ವಿಷಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷ ನಿಮ್ಮಪರ ಇದೆ ಎಂಬುದನ್ನು ಬಿಂಬಿಸಬೇಕೆಂದು ಸೂಚಿಸಿದ್ದಾರೆ.

ಪಾದಯಾತ್ರೆ ವೇಳೆ ಸಂಸದರು, ಶಾಸಕರು, ಬಿಬಿಎಂಪಿ ಸದಸ್ಯರು, ಪಕ್ಷದ ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕು. ವಿಧಾನಸಭೆ ಚುನಾವಣೆ ಪೂರ್ಣಗೊಳ್ಳುವವರೆಗೂ ಪ್ರತಿದಿನ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ಮಾಡಿದ್ದಾರೆ.

ಹಿಂದೆ ಬಿಜೆಪಿ ಅವಧಿಯಲ್ಲಿ ಮಹಾನಗರಕ್ಕೆ ಕೊಟ್ಟಿರುವ ಕೊಡುಗೆಗಳು, ಯಾವ ಯಾವ ಕ್ಷೇತ್ರದಲ್ಲಿ ಈಗಿನ ಸರ್ಕಾರ ವಿಫಲವಾಗಿದೆ ಎಂಬುದನ್ನು ಪರಿಣಾಮಕಾರಿಯಾಗಿ ಜನರಿಗೆ ಮನವರಿಕೆ ಮಾಡಿಕೊಟ್ಟರೆ ಚುನಾವಣೆಯಲ್ಲಿ ಹೆಚ್ಚಿನ ಅನುಕೂಲವಾಗಲಿದೆ ಎಂಬ ಸಲಹೆಗಳು ಕೇಳಿಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ