ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪ್ರಥಮ ಬಾರಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ

ಮೈಸೂರು,ಮಾ.1- ಇಂದಿನಿಂದ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಇದೇ ಪ್ರಥಮ ಬಾರಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ 17ರವರೆಗೆ ಪ್ರತಿ ದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದು ಅರ್ಥಶಾಸ್ತ್ರ, ಭೌತಶಾಸ್ತ್ರ ಪರೀಕ್ಷೆ ನಡೆದಿದೆ.

ಈ ಬಾರಿ ಪರೀಕ್ಷಾ ಕೇಂದ್ರಗಳಿಗೆ ಮೇಲ್ವಿಚಾರಕರು ಸೇರಿದಂತೆ ಯಾವುದೇ ಅಧಿಕಾರಿ, ಸಿಬ್ಬಂದಿಗಳು ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಎಂದರು.
ಪರೀಕ್ಷಾ ಅಕ್ರಮ ತಡೆಗಟ್ಟಲು 25 ಅಧಿಕಾರಿಗಳ ಸ್ಕ್ವಾಡ್‍ಗಳನ್ನು ನೇಮಿಸಲಾಗಿದೆ ಎಂದ ಅವರು, ಜಿಲ್ಲೆಯಾದ್ಯಂತ 50 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 37,205 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ವಿಜ್ಞಾನ ವಿಭಾಗದಲ್ಲಿ 13,341, ವಾಣಿಜ್ಯ ವಿಭಾಗದಲ್ಲಿ 13,290 ಹಾಗೂ ಕಲಾ ವಿಭಾಗದಲ್ಲಿ 10,724 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ