ನವದೆಹಲಿ, ಮಾ.5-ಸಂಸತ್ತಿನ ಮುಂದುವರೆದ ಬಜೆಟ್ ಅಧಿವೇಶನದ ಮೊದಲ ದಿನವೇ ಪಂಜಾಬ್ ನ್ಯಾಷನಲ್ ಬ್ಯಾಂಕ (ಬಿಎನ್ಬಿ) ಹಗರಣ ಹಾಗೂ ಕಾವೇರಿ ಜಲವಿವಾದ ವಿಷಯಗಳು ಕಲಾಪವನ್ನು ಬಲಿ ತೆಗೆದುಕೊಂಡಿದೆ.
ಸದನ ಆರಂಭವಾಗುತ್ತಿದ್ದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರು ಬಿಎನ್ಬಿ ಹಗರಣ ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದರೆ, ಇದೇ ವೇಳೆ ಎಐಎಡಿಎಂಕೆ ಮತ್ತು ಡಿಎಂಕೆ ಸದಸ್ಯರು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಧರಣಿ ನಡೆಸಿದರು. ಮತ್ತೊಂದೆಡೆ ಟಿಡಿಪಿ ಸದಸ್ಯರು ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿಗಿ ಪಟ್ಟು ಹಿಡಿದರು. ಇದರಿಂದಾಗಿ ಸದನದಲ್ಲಿ ಭಾರೀ ಗದ್ದಲ, ಕೋಲಾಹಲ ನಿರ್ಮಾಣವಾಯಿತು.
ಪ್ರತಿಭಟನಾನಿರತ ಸದಸ್ಯರನ್ನು ಸಮಾಧಾನ ಪಡಿಸಲು ಸಭಾಪತಿ ವೆಂಕಯ್ಯನಾಯ್ಡು ಮನವಿ ಮಾಡಿದರೂ ಪರಿಸ್ಥಿತಿ ತಿಳಿಗೊಳ್ಳಲಿಲ್ಲ. ಇದರಿಂದ ಬೇಸತ್ತ ನಾಯ್ಡು ಅವರು, 10 ನಿಮಿಷಗಳ ಕಾಲ ಕಲಾಪ ಮುಂದೂಡಿದರು.
ಮತ್ತೆ ಕಲಾಪ ಸಮಾವೇಶಗೊಂಡಾಗ ಇದೇ ಪರಿಸ್ಥಿತಿ ಮುಂದುವರೆಯಿತು. ಟಿಎಂಸಿ, ಎಐಎಡಿಎಂಕೆ, ಡಿಎಂಕೆ ಮತ್ತು ಟಿಡಿಪಿ ಸದಸ್ಯರು ತಮ್ಮ ತಮ್ಮ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ಮುಂದುವರೆಸಿದ್ದರಿಂದ ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.