ಕಾಂಗ್ರೆಸ್ ಸೇರುವವರ ಪಟ್ಟಿ ದೊಡ್ಡದಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಮಾ.5-ಕಾಂಗ್ರೆಸ್ ಸೇರುವವರ ಪಟ್ಟಿ ದೊಡ್ಡದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ. ಖೇಣಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾರ ವಿರೋಧವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರು ನಗರ ಹಾಗೂ ಚಾಮರಾಜನಗರದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ವಿಶೇಷ ವಿಮಾನದಲ್ಲಿ ಆಗಮಿಸಿ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುವವರು ದಿನೇ ದಿನೇ ಹೆಚ್ಚಾಗುತ್ತಿದೆ. ಪಕ್ಷ ಸೇರುವವರ ಪಟ್ಟಿ ದೊಡ್ಡದಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹಲವಾರು ಮಂದಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.

ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ಅವರ ಕಾಂಗ್ರೆಸ್ ಸೇರ್ಪಡೆಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಹಿರಿಯರ ಒಪ್ಪಿಗೆ ಪಡೆದೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.
ರಾಜ್ಯಸಭಾ ಚುನಾವಣೆ ಸಂಬಂಧ ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ರಾಜ್ಯಸಭೆ ಮೂರನೇ ಸ್ಥಾನಕ್ಕಾಗಿ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಜೆಡಿಎಸ್‍ನವರೊಂದಿಗೂ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ ಎಂದು ಖಾರವಾಗಿ ನುಡಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಅವಶ್ಯಕತೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮೇಘಾಲಯ-ತ್ರಿಪುರ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಮೂರ್ನಾಲ್ಕು ಬಾರಿ ಬಂದು ಹೋಗಿದ್ದಾರೆ. ಆದರೆ ಅವರ ಗಾಳಿ ರಾಜ್ಯದಲ್ಲಿ ಬೀಸಿಲ್ಲ ಎಂದು ವ್ಯಂಗ್ಯವಾಡಿದರು.
ನಮ್ಮ ಟಾರ್ಗೆಟ್ ಕೋಮುವಾದಿ ಪಕ್ಷಗಳನ್ನು ಸೋಲಿಸುವುದಾಗಿದೆ. ಕೋಮುವಾದಿಗಳನ್ನು ಸೋಲಿಸಲು ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂದು ಹೇಳಿದರು.
ಜೆಡಿಎಸ್ ಪಕ್ಷ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜೆಡಿಎಸ್-ಬಿಎಸ್‍ಪಿ ಮೈತ್ರಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ವೋಟಿಗೆ ಧಕ್ಕೆಯಾಗುವುದಿಲ್ಲ. ಮೈಸೂರು, ಬೆಂಗಳೂರು ಭಾಗದಲ್ಲಿ ನಮ್ಮ ಪಕ್ಷ 25 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದರು.
ಇದೇ 25ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಾರ್ವಜನಿಕ ಸಭೆ ನಡೆಸಲಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ರೋಡ್ ಶೋಗಳನ್ನು ನಡೆಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತು ನಾಳೆ ಈ ಭಾಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ ಸಂಜೆ ದೆಹಲಿಗೆ ತೆರಳಬೇಕಾಗಿರುವುದರಿಂದ ನಾಳಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಉಳಿದ ಶಂಕುಸ್ಥಾಪನೆ ಮತ್ತು ಕಾಮಗಾರಿಗಳಿಗೆ ಮಾ.10ರಂದು ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ , ಸಂಸದ ಧ್ರುವನಾರಾಯಣ್ ಜೊತೆಯಲ್ಲಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ