ತುಮಕೂರು,ಮಾ.7-ಬಿಜೆಪಿ ಇದುವರೆಗೂ ಪರಿವರ್ತನಾ ರ್ಯಾಲಿ ಹಮ್ಮಿಕೊಂಡಿದ್ದು, ಇದೀಗ ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ತಿಳಿಸಿದರು.
ಕಾರ್ಯಕರ್ತರನ್ನು ಹುರಿದುಂಬಿಸುವ ಸಲುವಾಗಿ ಅಂದು ಸಂಜೆ ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ತುಮಕೂರಿನ 11 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಸದ್ಯದಲ್ಲೇ ಅಂತಿಮಗೊಳಿಸಲಾಗುತ್ತದೆ. ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳ ಘೋಷಣೆ ಮಾಡಿದೆ.
ಕಾಂಗ್ರೆಸ್ ಹಾಗೂ ಬಿಜೆಪಿ ರಾಷ್ಟ್ರೀಯ ಪಕ್ಷಗಳಾಗಿರುವುದರಿಂದ ರಾಷ್ಟ್ರಾಧ್ಯಕ್ಷರ ಸೂಚನೆ ಮೇರೆಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದರು.
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ ಅವರು ಸ್ಥಳೀಯ ರಾಜಕೀಯವನ್ನು ಮಲೀನಗೊಳಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಜ್ಯೋತಿ ಗಣೇಶ್, ಕಳೆದ ಆರು ತಿಂಗಳಿನಿಂದ ಮತದಾರರಿಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಈ ಬಗ್ಗೆ ಜೆಡಿಎಸ್ ವರಿಷ್ಠರು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಶಿವಪ್ರಸಾದ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹನುಮಂತರಾಜು, ಎಚ್.ಎಂ.ರಮೇಶ್, ನಂದೀಶ್, ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.