ಬೆಂಗಳೂರು, ಮಾ.12- ಗೆಲ್ಲುವ ವಿಶ್ವಾಸದಿಂದಲೇ ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು.
ರಾಜ್ಯಸಭೆ ಚುನಾವಣಾ ಅಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರಿಗೆ ಫಾರೂಕ್ ಅವರು ಇಂದೂ ನಾಮಪತ್ರದ ಪ್ರತಿಯನ್ನು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಕಾಂಗ್ರೆಸ್ ವರಿಷ್ಠರನ್ನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆ ಉಪಚುನಾವಣೆಯಲ್ಲಿ ಜಾತ್ಯಾತೀತ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿ ಎಂಬ ಉದ್ದೇಶದಿಂದ ಜೆಡಿಎಸ್ ಸ್ಪರ್ಧೆ ಮಾಡಿರಲಿಲ್ಲ. ಕಾಂಗ್ರೆಸ್ ಮೂರನೇ ಅಭ್ಯರ್ಥಿಯನ್ನು ರಾಜ್ಯಸಭಾ ಚುನಾವಣಾ ಕಣದಿಂದ ವಾಪಸ್ ಪಡೆಯುವುದು ಅಥವಾ ಬಿಡುವುದು ಅವರಿಗೆ ಬಿಟ್ಟದ್ದು, ನಮ್ಮ ಪಕ್ಷದ ಯಾರೂ ಕೂಡ ಕಾಂಗ್ರೆಸ್ ನಾಯಕರನ್ನು ಈ ವಿಚಾರದಲ್ಲಿ ಮಾತುಕತೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ನ 7 ಮಂದಿ ಬಂಡಾಯ ಶಾಸಕರು ಇನ್ನೂ ಪಕ್ಷದಲ್ಲೇ ಇದ್ದಾರೆ. ಅವರ್ಯಾರೂ ಕೂಡ ಪಕ್ಷ ಬಿಟ್ಟಿರುವುದಾಗಿ ಹೇಳಿಲ್ಲ. ಕಳೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ವ್ಹಿಪ್ ಉಲ್ಲಂಘನೆ ಮಾಡಿದ ಪ್ರಕರಣದ ವಿಧಾನಸಭೆ ಸಭಾಧ್ಯಕ್ಷರ ಬಳಿ ಇದೆ ಎಂದರು.
ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಅದರ ನಿಜವಾದ ಉದ್ದೇಶವಿದ್ದರೆ ಜಾತ್ಯಾತೀತ ಪಕ್ಷಗಳ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಹೇಳಿದರು.
ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತ ಎಲ್ಲ ಶಾಸಕರ ಒಮ್ಮತದಿಂದ ಈ ಬಾರಿಯ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿ ಫಾರೂಕ್ ಅವರನ್ನು ಕಣಕ್ಕಿಳಿಸಲಾಗಿದೆ. ಜೆಡಿಎಸ್ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದೆ. ಈ ರಾಜ್ಯಸಭೆ ಚುನಾವಣೆಯಲ್ಲೂ ಜಾತ್ಯಾತೀತ ಪಕ್ಷವನ್ನು ಒಡೆದು ಕಾಂಗ್ರೆಸ್ ಪಕ್ಷದ ಮೂರನೇ ಅಭ್ಯರ್ಥಿ ಗೆಲ್ಲುವುದಾದರೆ ನಮ್ಮದೇನು ಅಭ್ಯಂತರವಿಲ್ಲ ಎಂದು ರೇವಣ್ಣ ಹೇಳಿದರು.