ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಮಾ.12- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಇಂದು ಸಿಸಿಎಎ ತರಬೇತಿ ಪಡೆದ ಅಭ್ಯರ್ಥಿಗಳು ನಗರದ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ತಮ್ಮ ಬೇಡಿಕೆ ಈಡೇರಿಸದಿದ್ದರೆ ಪ್ರಾಣ ಬಿಡುವುದಾಗಿ ಬೆದರಿಸಿದ ಪ್ರತಿಭಟನಾಕಾರರು ಪಿನಾಯಿಲ್ ಕುಡಿಯಲು ಮುಂದಾದಾಗ ಸ್ಥಳದಲ್ಲಿದ್ದ ಪೆÇಲೀಸರು ಕೂಡಲೇ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಅವರ ಪ್ರಯತ್ನವನ್ನು ವಿಫಲಗೊಳಿಸಿದರು.
ಈ ಹಂತದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕಳೆದ ಹಲವಾರು ದಿನಗಳಿಂದ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಯಾರೊಬ್ಬರೂ ಈ ಬಗ್ಗೆ ಕ್ರಮ ವಹಿಸಿಲ್ಲ. ನಮ್ಮ ಕಷ್ಟವನ್ನು ಕೇಳಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಉದ್ಯೋಗ ಒದಗಿಸಬೇಕು. ಈ ಸಂಬಂಧ ಕೇಂದ್ರ ರೈಲ್ವೆ ಸಚಿವರ ಮೇಲೆ ರಾಜ್ಯದ ಕೇಂದ್ರ ಸಚಿವರು ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಸಿಸಿಎಎ ತರಬೇತಿ ಪಡೆದಿರುವ ನಾವು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಅರ್ಹತೆ ಪಡೆದಿದ್ದರೂ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡದೆ ಇರುವುದರಿಂದ ನಮ್ಮ ವಯಸ್ಸು ಮೀರುತ್ತಿದೆ. ಇದರಿಂದ ಮುಂದೆ ಅವಕಾಶ ದೊರೆಯಲಾರದು. ಈ ಹಿನ್ನೆಲೆಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ