ನೆಲಮಂಗಲ, ಮಾ.12- ಜಾಹೀರಾತುಗಳಿಗೆ ಖರ್ಚು ಮಾಡುತ್ತಿರುವ ಹಣ ಸಿದ್ದರಾಮನ ಹುಂಡಿಯಿಂದ ಬಂದಿಲ್ಲ. ಅದು ಜನರ ತೆರಿಗೆ ಹಣವಾಗಿದೆ. ಸಾವಿರಾರು ಕೋಟಿ ರೂ.ಖರ್ಚು ಮಾಡಿ ಮಾಧ್ಯಮಗಳಲ್ಲಿ ಸರ್ಕಾರದ ಸಾಧನೆ ಎಂದು ಬಿಂಬಿಸುತ್ತಿರುವುದು ನಾಚಿಗೇಡಿನ ಸಂಗತಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದರು.
ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವಿಕಾಸಪರ್ವ ಜೆಡಿಎಸ್ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ರಾಜ್ಯದ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿಲ್ಲ. ಬದಲಾಗಿ ಆರೋಪ- ಪ್ರತ್ಯಾರೋಪಗಳಲ್ಲೇ ಕಾಲ ಹರಣ ಮಾಡುತ್ತಿವೆ. ಇಂತಹ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವೇ ಎಂದರು.
ರೈತರ ಆತ್ಮಹತ್ಯೆ, ಅಧಿಕಾರಿಗಳಿಗೆ ಕಿರುಕುಳ ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದರೂ ಕ್ಷುಲ್ಲಕ ಕಾರಣಗಳಿಗೆ ರಾಷ್ಟ್ರೀಯ ಪಕ್ಷಗಳು ಕಾಲಹರಣ ಮಾಡುತ್ತಿವೆ. 10 ಪರ್ಸೆಂಟ್, 90 ಪರ್ಸೆಂಟ್ ಎಂದು ಒಬ್ಬರ ಮೇಲೊಬ್ಬರು ಹೇಳಿಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುವುದು. 70 ವರ್ಷ ತುಂಬಿದ ಹಿರಿಯ ನಾಗರಿಕರಿಗೆ 5ಸಾವಿರ ರೂ. ಮಾಸಾಶನ ನೀಡುತ್ತೇವೆ. ಕೆಂಪೇಗೌಡರ ಹೆಸರಿನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ರಾಜ್ಯಾದ್ಯಂತ ತೆರೆದು ನಿರುದ್ಯೋಗ ಯುವಕ, ಯುವತಿಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಕಾಂತರಾಜು ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.
ನೆಲಮಂಗಲ ತಾಲ್ಲೂಕಿನಲ್ಲಿ ಸಮಾಜಘಾತುಕ ವ್ಯಕ್ತಿಗಳು ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಇಂತಹವರು ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬಂದಾಗ ಮನೆ ಹತ್ತಿರಕ್ಕೂ ಸೇರಿಸಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ತಾಲ್ಲೂಕಿನಲ್ಲಿ ಹತ್ಯೆಗೀಡಾದ ಬಿ.ಎಂ.ಎಲ್.ಕೃಷ್ಣಪ್ಪ ಅವರೇ ಅಭ್ಯರ್ಥಿ ಎಂದು ಭಾವಿಸಿ ಅವರ ಮಗ ಡಾ.ಶ್ರೀನಿವಾಸ್ ಮೂರ್ತಿ ಅವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಮಾಜಿ ಎಂಎಲ್ಸಿ ಕೃಷ್ಣಪ್ಪ, ಎಂಎಲ್ಸಿ ಶರವಣ, ಶಾಸಕ ಡಾ.ಶ್ರೀನಿವಾಸಮೂರ್ತಿ, ಜೆಡಿಎಸ್ ಮುಖಂಡರಾದ ಎಂ.ಬಿ.ಪಿ.ರಾಮಕೃಷ್ಣಪ್ಪ, ಗಂಗಹನುಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.