ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯ ಸಾದ್ಯತೆ

ಬೆಂಗಳೂರು, ಮಾ.13- ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೊಂದು ವಾರದ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವು ಭಾಗಗಳಲ್ಲಿ ಚದುರಿದಂತೆ ಗಾಳಿ ಮಿಶ್ರಿತ ಗುಡುಗು-ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದಲ್ಲಿ ಮಳೆ ಆರಂಭವಾಗಲಿದೆ. ಹಬ್ಬದ ನಂತರವೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಾಳೆಯಿಂದ ಮಾ.19ರ ವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗಲಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಅಕಾಲಿಕ ಮಳೆ ಬರಲಿದೆ. ಮಾರ್ಚ್‍ನಲ್ಲಿ ಕೆಲವೆಡೆ ಮಳೆಯಾಗಿರುವ ನಿದರ್ಶನಗಳು ಇವೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಬೇಸಿಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.
ಆದರೆ, ವ್ಯಾಪಕವಾಗಿ ಹಾಗೂ ಭಾರೀ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಶ್ರೀನಿವಾಸರೆಡ್ಡಿ ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ