ಬೆಂಗಳೂರು, ಮಾ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ವಿರೋಧಿಸುತ್ತಿರುವವರ ಆಳ್ವಿಕೆಯಿಂದಾಗಿ ಸಂವಿಧಾನದ ಆಶಯ ಬುಡಮೇಲಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ವೈ. ಅಂಬೇಡ್ಕರ್ ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ಜಾತ್ಯತೀತ ಸಂಘಟನೆಗಳ ಒಕ್ಕೂಟದಿಂದ ನಗರದ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೂ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆದ ಬೃಹತ್ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.
ಶತಮಾನಗಳಿಂದ ಅಂಬೇಡ್ಕರ್ ಅವರ ಸಿದ್ಧಾಂತಗಳನ್ನು ವಿರೋಧಿಸುತ್ತಾ ಬಂದವರು ಇಂದು ಅವರನ್ನೇ ಪೂಜಿಸುವ ನಾಟಕವಾಡುತ್ತಿದ್ದಾರೆ. ಇದರ ವಿರುದ್ಧ ಜನರಲ್ಲಿ ಜಾಗೃತಿ ಮೂಡಬೇಕಿದೆ. ಅದರಲ್ಲೂ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಸಂವಿಧಾನ ರಕ್ಷಣೆಗೆ ಹೋರಾಟ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಅಂಬೇಡ್ಕರ್ ಅವರ ಸಿದ್ಧಾಂತ ಹೋರಾಟವನ್ನು ಉಳಿಸುವ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕ ಸಮಾಜ ಕೈ ಜೋಡಿಸುವ ಅಗತ್ಯವಿದೆ ಎಂದರು.