ಪಂಚಾಯಿತಿ ಸಭೆಗಳಿಗೆ ಸರಿಯಾದ ಮಾಹಿತಿ ಇಲ್ಲದೆ ಹಾಜರಾಗಿ ಬೇಜಾವಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. ಪ್ರಸಾದ್

PRASAD BANGALORE RURAL ZILLA PANCHAYATH PRESIDENT

ಬೆಂಗಳೂರು,ಮಾ.17- ಜಿಲ್ಲಾ ಪಂಚಾಯಿತಿ ಸಭೆಗಳಿಗೆ ಸರಿಯಾದ ಮಾಹಿತಿ ಇಲ್ಲದೆ ಹಾಜರಾಗಿ ಬೇಜಾವಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. ಪ್ರಸಾದ್ ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ, ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಪ್ರಗತಿ ಪರಿಶೀಲನೆ ನಡೆಸಿ ಅಧ್ಯಕ್ಷರು ಮಾಹಿತಿ ಕೇಳಿದಾಗ ವಿವಿಧ ಅಧಿಕಾರಿಗಳು ಮಾಹಿತಿ ನೀಡಲು ವಿಫಲರಾದರು, ಕೆಲ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದರು. ಇದಕ್ಕೆ ಅಸಮಾಧಾನಗೊಂಡ ವಿ.ಪ್ರಸಾದ್, P ಳೆದ ಹಲವಾರು ಸಭೆಗಳಿಂದಲೂ ಎಚ್ಚರಿಕೆ ನೀಡಿದರೂ ಇದೇ ರೀತಿ ಪುನರಾವರ್ತನೆಗೊಂಡಿದ್ದರಿಂದ ಹೊಸಕೋಟೆ ಕಾರ್ಯನಿರ್ವಹಣಾಧಿಕಾರಿ, ಕೈಗಾರಿಕಾ ಇಲಾಖಾ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಸಹಾಯಕ ಇಂಜಿನಿಯರ್‍ಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕಾರಣಕೇಳಿ ನೋಟೀಸ್ ನೀಡುವಂತೆ ಹಾಗೂ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಸಾಮಾಜಿಕ ಅರಣ್ಯ ವಿಭಾಗದಿಂದ ಎಸ್‍ಸಿಪಿ ಯೋಜನೆಯಡಿ ಸೋಲಾರ್ ಲ್ಯಾಂಪ್ಸ್, ಸೋಲಾರ್ ಲ್ಯಾಂಟಿನ್ರ್ಸ್ ನೀಡುವ ಬದಲು ಜೈವಿಕ ಅನಿಲ ಘಟಕಗಳನ್ನು (ಬಯೋಗ್ಯಾಸ್) ನಿರ್ಮಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಕೆಲವೊಂದು ಯೋಜನೆಗಳಡಿ ಫಲಾನುಭವಿಗಳ ಆಯ್ಕೆಗೊಳಿಸಲು ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ ಕಳೆದ ಸಭೆಗಳಲ್ಲಿಯೇ ಸೂಚಿಸಿದರೂ ಸಮಿತಿ ರಚನೆ ಮಾಡದೆ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.

ಶುದ್ಧ ಕುಡಿಯುವ ನೀರು ಘಟಕಗಳನ್ನು ನಿರ್ವಹಣೆ ಮಾಡದ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅಧ್ಯಕ್ಷರು, ಇನ್ನು ಮುಂದೆ ಏಜೆನ್ಸಿಗಳಿಗೆ ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣಕ್ಕೆ ಅನುಮತಿ ನೀಡುವಾಗ ಗ್ರಾಮಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಕಟ್ಟುನಿಟ್ಟಿನ ಮಾನದಂಡ ನಿಗದಿಪಡಿಸಬೇಕೆಂದರು.
ಜಿಪಂ ಉಪಾಧ್ಯಕ್ಷೆ ಪಿ.ಎನ್.ಅನಂತಕುಮಾರಿ, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆ ಆರಂಭಕ್ಕೂ ಮುನ್ನ ಹೊಸದಾಗಿ ಆಯ್ಕೆಗೊಂಡಿರುವ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ