ಬೆಂಗಳೂರು, ಮಾ.17- ಪ್ರತ್ಯೇಕ ಲಿಂಗಾಯಿತ ಧರ್ಮಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ನಾಳೆ ಬೆಳಗ್ಗೆ 10 ಗಂಟೆಗೆ ಟೌನ್ಹಾಲ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು ಎಂದು ಲಿಂಗಾಯಿತ ಧರ್ಮ ಮಹಾಸಭಾ ಪ್ರಧಾನಕಾರ್ಯದರ್ಶಿ ಜಗದ್ಗುರು ಬಸವಕುಮಾರ ಸ್ವಾಮಿ ತಿಳಿಸಿದರು.
ಲಿಂಗಾಯಿತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಬೇಕು. ಧಾರ್ಮಿಕ ಅಲ್ಪಸಂಖ್ಯಾತರ ಮೀಸಲಾತಿ ಸೌಲಭ್ಯ ಕುರಿತಂತೆ ನ್ಯಾ.ನಾಗಮೋಹನದಾಸ್ ಅವರ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಈ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.19ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪ್ರತ್ಯೇಕ ಲಿಂಗಾಯಿತ ಧರ್ಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.