ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಧಿಕಾರ ದುರ್ಬಳಕೆ ಮಾಡಿಕೊಂಡು ದೇವೇಗೌಡರು ಹಾಗೂ ಮಕ್ಕಳ ವಿರುದ್ಧ ದ್ವೇಷದ ರಾಜಕಾರಣ: ಜೆಡಿಎಸ್ ಆರೋಪ

ಬೆಂಗಳೂರು,ಮಾ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಮಕ್ಕಳ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಡಾ.ವಿ.ರಾಘವೇಂದ್ರ ರಾವ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದ ಬಿ.ಪಿ.ಮಂಜೇಗೌಡ ಅವರಿಗೆ ರಾಜೀನಾಮೆ ಕೊಡಿಸಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಹಾಕಿದ್ದಾರೆ. ಸರ್ಕಾರಿ ಅಧಿಕಾರಿಯಾಗಿರುವ ಅವರಿಗೆ ಚುನಾವಣೆಗೆ ಸ್ಫರ್ಧಿಸುವಂತೆ ಒತ್ತಡ ಹಾಕಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸಿ ಕೊಡಿಸಲು ಮುಖ್ಯಮಂತ್ರಿ ಸ್ಥಾನದ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ದೇವೇಗೌಡರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿದ ಅವರು ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋತಿದ್ದಂತಹ ಸಂದರ್ಭದಲ್ಲಿ ಧೈರ್ಯ ತುಂಬಿ ರಾಜಕೀಯವಾಗಿ ಮರು ಹುಟ್ಟು ನೀಡಿದವರು ದೇವೇಗೌಡರು. ಈಗ ಅವರ ಬಗ್ಗೆಯೇ ಮಾತನಾಡುವುದು ಸರಿಯಲ್ಲ. ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಮುಖ್ಯಮಂತ್ರಿಗಳಿಗೆ ಇದೆಯೇ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರು ಈಗ ಭ್ರಷ್ಟರಿಗೇ ಮಣೆ ಹಾಕುತ್ತಿದ್ದಾರೆ. ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ