ಬೆಂಗಳೂರು ಮಾ.21-ಬಿಸಿಯೂಟ ತಯಾರು ಮಾಡುವ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಮತ್ತು ಇನ್ನಿತರ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ನೂತನವಾಗಿ ರಚನೆಯಾಗಿರುವ ಎಂ.ಇ.ಪಿ ಪಕ್ಷದ ವತಿಯಿಂದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಮನವಿ ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾ.ಬಿ.ಎಂ ಶ್ಯಾಮಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿಸಿಯೂಟ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆ ಈಡೇರಿಸಲು ಕೂಡಲೇ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿ, ಪ್ರಕರಣದ ವಿಚಾರಣೆಯನ್ನು ಏಪ್ರಿಲï 4ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:
ಸುಮಾರು ಒಂದು ತಿಂಗಳ ಹಿಂದೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಆವರಣದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಗಲು-ರಾತ್ರಿ ಧರಣಿ ಕೈಗೊಂಡಿದ್ದರು. ಈ ವೇಳೆ, ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಆಲ್ ಇಂಡಿಯಾ ಮಹಿಳಾ ಎಂಪವರ್ಮೆಂಟï ಪಾರ್ಟಿ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಕ್ ಅವರು ಬಿಸಿಯೂಟ ಕಾರ್ಯಕರ್ತೆಯರ ಕುಂದು-ಕೊರತೆಗಳನ್ನು ಕೇಳಿ ಸಮಾಧಾನ ಪಡಿಸಿದ್ದರು.
ಜತೆಗೆ ಕೋರ್ಟ್ ಮೂಲಕವೇ ಅವರಿಗೆ ಸಲ್ಲಬೇಕಾಗಿರುವ ನ್ಯಾಯಬದ್ಧ ವೇತನ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಭರವಸೆ ನೀಡಿದ್ದರು. ಎಂಇಪಿ ಪರವಾಗಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿ ಸಾಧ್ಯವಾದಷ್ಟು ಬೇಗ ಇವರ ಸಮಸ್ಯೆಗಳನ್ನು ಪರಿಹಾರ ಮಾಡಿ ಎಂದು ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿರುವುದಕ್ಕೆ ಡಾ.ನೌಹೀರಾ ಶೇಕ್ ಹರ್ಷವ್ಯಕ್ತಪಡಿಸಿದ್ದಾರೆ.
ಇದು ಬಿಸಿಯೂಟ ಕಾರ್ಯಕರ್ತೆಯರ ಹೋರಾಟಕ್ಕೆ ಸಿಕ್ಕಿದ ಮೊದಲ ಜಯವೆಂದು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ಈಗಲಾದರೂ ಮನಸ್ಸು ಮಾಡಿ ಬಿಸಿಯೂಟ ತಯಾರಕರ ವೇತನವನ್ನು ಹೆಚ್ಚಳ ಮಾಡಬೇಕು ಮತ್ತು ಅವರಿಗೆ ದೊರೆಯಬೇಕಾದ ರಜೆ , ಆರೋಗ್ಯ ಸೌಲಭ್ಯ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗಬಹುದಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಡಾ.ನೌಹೀರಾ ಶೇಕ್ ಮನವಿ ಮಾಡಿದ್ದಾರೆ.