ಬೆಂಗಳೂರು, ಮಾ.21-ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಸಂಸದರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರ ಸಭೆಯನ್ನು ನಾಳೆ (ಮಾ.22) ಕರೆದಿದೆ.
ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸದರ ಸಭೆ ನಡೆಯಲಿದ್ದು, ಫೆ.16 ರಂದು ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಎಲ್ಲಾ ಲೋಕಸಭೆ, ರಾಜ್ಯಸಭೆ ಸದಸ್ಯರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಆಹ್ವಾನ ನೀಡಲಾಗಿದೆ.
ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ನೀರಾವರಿ ಇಲಾಖೆ ಅಧಿಕಾರಿಗಳು, ಕಾನೂನು ಇಲಾಖೆ ಹಿರಿಯ ಅಧಿಕಾರಿಗಳು, ರಾಜ್ಯದ ಪರ ವಕೀಲರು ಪಾಲ್ಗೊಳ್ಳಲಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಮುಂದೆ ಯಾವ ರೀತಿಯ ಕಾನೂನು ಹೋರಾಟ ಕೈಗೊಳ್ಳಬೇಕೆಂಬ ಬಗ್ಗೆ ಸಂಸದರ ಸಲಹೆಯನ್ನು ಮುಖ್ಯಮಂತ್ರಿ ಪಡೆಯಲಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಯಾವ ನಿಲುವನ್ನು ತಳೆಯಬೇಕು, ಕಾನೂನು ತಜ್ಞರು ನೀಡಿರುವ ಸಲಹೆಗಳು ಹಾಗೂ ಸುಪ್ರೀಂಕೋರ್ಟ್‍ನಲ್ಲಿ ಮತ್ತೆ ತೀರ್ಪನ್ನು ಮರು ಪರಿಶೀಲಿಸುವಂತೆ ಅರ್ಜಿ ಸಲ್ಲಿಸುವುದರಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಸಲಾಗುತ್ತದೆ.
ಈ ಸಭೆಯಲ್ಲಿ ಕೈಗೊಳ್ಳುವ ನಿರ್ಣಯವನ್ನು ಮಾ.23 ರಂದು ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ರಾಜ್ಯಸರ್ಕಾರ ಕಾವೇರಿ ನದಿ ವಿವಾದದ ವಿಚಾರದಲ್ಲಿ ಮುಂದಿನ ಹೆಜ್ಜೆ ಇಡಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.