ಬೆಂಗಳೂರು, ಮಾ.23- ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಯಾವುದೇ ಭ್ರಷ್ಟಾಚಾರ ಪ್ರಕರಣಗಳಿಗೆ ಸಿಲುಕದೆ ಪಾರದರ್ಶಕವಾಗಿ ಆಡಳಿತ ನಡೆಸುವ ಮೂಲಕ ಹಗರಣರಹಿತ ಸರ್ಕಾರವೆನಿಸಿಕೊಂಡಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೆರೇಗೌಡ ಹೇಳಿದರು.
ದೇವನಹಳ್ಳಿ ತಾಲ್ಲೂಕು ಚಪ್ಪರದಕಲ್ಲು ಗ್ರಾಮದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಹಾಗೂ ದೊಡ್ಡಬಳ್ಳಾಪುರ ಟೌನ್ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತಾನಾಡಿದರು.
ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಋಣಮುಕ್ತ, ರೈತರ ಸಾಲಮನ್ನಾ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದ ಜನರ ಆಶೋತ್ತರಗಳನ್ನು ಈಡೇರಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದು ತಿಳಿಸಿದರು.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ 43 ಕೋಟಿ ರೂ. ವೆಚ್ಚದ ಜಿಲ್ಲಾಡಳಿತ ಭವನ ಹಾಗೂ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿದರು.
ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಚಿವ ಕೃಷ್ಣಭೆರೇಗೌಡ ಇದೇ ವೇಳೆ ನೆರವೇರಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ.ಎಂ.ವೀರಪ್ಪ ಮೊಯ್ಲಿ, ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಎಸ್.ಪಾಲಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ, ನೆಲಮಂಗಲ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಿ.ಎನ್.ಅನಂತಕುಮಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಅಪರ ಜಿಲ್ಲಾಧಿಕಾರಿ ಎ.ಎಂ.ಯೊಗೀಶ್ ಮತ್ತಿತರರು ಉಪಸ್ಥಿತರಿದ್ದರು.