ಕಾಂಗ್ರೆಸ್ ಪಕ್ಷದಿಂದ ಆದಾಯ ತೆರಿಗೆ ಇಲಾಖೆ ವಿರುದ್ಧ ಪ್ರತಿಭಟನೆ: ವಿಪಕ ನಾಯಕ ಜಗದೀಶ್ ಶೆಟ್ಟರ್ ಟೀಕೆ

ಬೆಂಗಳೂರು, ಮಾ.23-ಹಲವು ವರ್ಷಗಳ ಕಾಲ ದೇಶವನ್ನು ಆಳಿದ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಪಕ್ಷ ಆದಾಯ ತೆರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲು ನಾಚಿಕೆಯಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದರು.

ರಾಜ್ಯಸಭೆ ಚುನಾವಣೆಗೆ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ದಾಳಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಆದಾಯ ತೆರಿಗೆ ಇಲಾಖೆ ಸ್ವತಂತ್ರ ಸಂಸ್ಥೆಯಾಗಿದ್ದು, ಯಾವುದೇ ಪಕ್ಷಕ್ಕೆ ಸಂಬಂಧವಿಲ್ಲ. ಲಭ್ಯವಿರುವ ಮಾಹಿತಿ ಆಧರಿಸಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ.ಕಾಂಗ್ರೆಸ್‍ನವರು ಪ್ರಾಮಾಣಿಕವಾಗಿದ್ದರೆ, ನೂರಕ್ಕೆ ನೂರರಷ್ಟು ಸರಿಇದ್ದರೆ ಆದಾಯ ತೆರಿಗೆ ಇಲಾಖೆ ದಾಳಿಗೆ ಏಕೆ ಹೆದರಬೇಕು? ಅಘೋಷಿತ ಆಸ್ತಿ ನೂರಾರು ಕೋಟಿ ಇರುವುದು ಕಂಡು ಬಂದಿದೆ. ಕಪ್ಪು ಹಣವೂ ಹೊರಬರುತ್ತಿದೆ. ಕಾಂಗ್ರೆಸ್‍ನವರು ಲೂಟಿ ಮಾಡಿದ್ದಾರೆ. ಹೀಗಾಗಿ ಆದಾಯ ತೆರಿಗೆ ಇಲಾಖೆ ವಿರುದ್ಧ ಧರಣಿ ಮಾಡುತ್ತಿದ್ದಾರೆ ಎಂದರು.

ಮಹಾಸಭಾ ತೀರ್ಮಾನಕ್ಕೆ ಬದ್ಧ:
ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ವೀರಶೈವ ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಬಿಜೆಪಿ ಮೊದಲಿನಿಂದಲೂ ಹೇಳುತ್ತಾ ಬಂದಿದೆ. ಲಿಂಗಾಯತ ಧರ್ಮದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡಿದೆ. ಚುನಾವಣೆ ಹಿನ್ನೆಲೆಯಲ್ಲಿ ಧರ್ಮದ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಆದಾಯ ತೆರಿಗೆ ಇಲಾಖೆ ತಾಲಿಬಾನ್ ಅಲ್ಲ:
ಆದಾಯ ತೆರಿಗೆ ಇಲಾಖೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡಲು ಅವರೇನು ತಾಲಿಬಾನ್‍ಗಳೇ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದರು.

ಪ್ರಾಮಾಣಿಕವಾಗಿರುವವರಿಗೆ ಆದಾಯ ತೆರಿಗೆ ಇಲಾಖೆ ಎಳ್ಳಷ್ಟೂ ತೊಂದರೆ ಕೊಟ್ಟಿಲ್ಲ. ಕಾಂಗ್ರೆಸ್‍ನವರು ಪ್ರಾಮಾಣಿಕವಾಗಿದ್ದರೆ ಆದಾಯ ತೆರಿಗೆ ಇಲಾಖೆ ದಾಳಿಗೆ ಏಕೆ ಹೆದರಬೇಕು? ಎಂದರು.

ಕಾಂಗ್ರೆಸ್ ಪಕ್ಷ ಅಕ್ರಮ ಹಣ ಹೊಂದಿರಬೇಕು. ಅದಕ್ಕಾಗಿ ಆದಾಯ ತೆರಿಗೆ ಇಲಾಖೆ ಕಂಡ ಭಯವಾಗುತ್ತದೆ. ದಾಳಿಗೂ ಮುನ್ನವೇ ಆದಾಯ ತೆರಿಗೆ ಇಲಾಖೆ ಭಯ ಪಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ