ತುಮಕೂರು, ಮಾ.23- ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನೆಯನ್ನು ಬಿಂಬಿಸುವ ನುಡಿದಂತೆ ನಡೆದಿದ್ದೇವೆ ಎಂಬ ಸಾಧನೆ ಸಂಭ್ರಮದ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಟಿ.ಬಿ.ಜಯಚಂದ್ರ ಬಿಡುಗಡೆ ಮಾಡಿದರು.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಹಳಷ್ಟು ಸಾಧನೆ ಮಾಡಲಾಗಿದೆ ಎಂದು ಈ ವೇಳೆ ಸಚಿವರು ಹೇಳಿದರು.
ರೈತಪರ ಯೋಜನೆಗಳು, ಅಲ್ಪಸಂಖ್ಯಾತರಿಗೆ ಶಾಧಿಭಾಗ್ಯ ಯೋಜನೆ, ಶಿಕ್ಷಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿ ಬಡಜನರು, ಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರಿಗೆ, ಅಲೆಮಾರಿಗಳಿಗೆ ನಿವೇಶನ ಹಾಗೂ ವಸತಿ, ಜಮೀನು ನೀಡಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.
ನಗರದ ಶಾಸಕ ಡಾ.ರಫಿಕ್ ಅಹಮ್ಮದ್, ಜಿಲ್ಲಾಧಿಕಾರಿ ಕೆ.ಪಿ.ಮೋಹನ್ರಾಜ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್, ಅಪರ ಜಿಲ್ಲಾಧಿಕಾರಿ ಸಿ.ಅನಿತಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.