ಚಿಕ್ಕಬಳ್ಳಾಪುರ, ಮಾ.27- ಜೆಡಿಎಸ್ನೊಂದಿಗೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡಾ ಖಂಡಿತವಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಈಗಾಗಲೇ ಬಿಜೆಪಿಯೊಂದಿಗೆ ಸಂಬಂಧ ಇಟ್ಟುಕೊಂಡಿದೆ. ಅವರ ಜತೆ ಯಾವುದೇ ಸಂದರ್ಭದಲ್ಲೂ ಮೈತ್ರಿ ಸಾಧ್ಯವಿಲ್ಲ ಎಂದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಅದೇ ರೀತಿ ಜೆಡಿಎಸ್ ಕೂಡ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಜೆಡಿಎಸ್, ಕಾಂಗ್ರೆಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳುವಂತೆ ಮಾಡಿದ್ದ ಮನವಿ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್, ಕಾಂಗ್ರೆಸ್ ನಡುವೆ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮೈತ್ರಿಯನ್ನು ನಿರಾಕರಿಸಿದ್ದಾರೆ.
ಇದರಿಂದ ಜಾತ್ಯಾತೀತ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಬೇಕೆಂಬ ಪ್ರಗತಿಪರರ ಆಶಯಕ್ಕೆ ತಣ್ಣೀರೆರಚಿದಂತಾಗಿದ್ದು, ಈ ಪ್ರಗತಿಪರರ ಹೊಂದಾಣಿಕೆ ಸೂತ್ರಕ್ಕೆ ಜೆಡಿಎಸ್ನಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಕಾಂಗ್ರೆಸ್ ನಕಾರಾತ್ಮಕವಾಗಿ ಸ್ಪಂದಿಸಿದೆ.
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಗಂಭೀರ ಆರೋಪ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.