ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೊಂದಿಗೆ ಅಮಿತ ಶಾ ರಹಸ್ಯ ಮಾತುಕತೆ

ಶಿವಮೊಗ್ಗ ,ಮಾ.27-ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪನವರೊಂದಿಗೆ ಇಂದು ಸುಮಾರು 20 ನಿಮಿಷಗಳ ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ.
ಶಿವಮೊಗ್ಗದ ಐಬಿಯಲ್ಲಿ ಬೆಳಗ್ಗೆ ಅಮಿತ್ ಷಾ, ಯಡಿಯೂರಪ್ಪ ಮತ್ತು ಸಂಸದ ಪ್ರಹ್ಲಾದ್ ಜೋಷಿ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಜಿಲ್ಲಾ ಘಟಕದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಮುಂದಾಗಿರುವ ಅಮಿತ್ ಷಾ ಯಡಿಯೂರಪ್ಪ ಹಾಗೂ ಪಕ್ಷದ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರನ್ನು ಒಂದೇ ವೇದಿಕೆಗೆ ಕರೆತರುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ.
20 ನಿಮಿಷಗಳ ಮಾತುಕತೆಯಲ್ಲಿ ಮುಖ್ಯವಾಗಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಈಶ್ವರಪ್ಪನವರಿಗೆ ಟಿಕೆಟ್ ನೀಡಬೇಕೆ ಇಲ್ಲವೆ ಜಿಲ್ಲಾಧ್ಯಕ್ಷ ರುದ್ರೇಗೌಡರನ್ನು ಕಣಕ್ಕಿಳಿಸಬೇಕೆ ಎಂಬುದರ ಬಗ್ಗೆ ಚರ್ಚೆ ನಡೆದಿದೆ.

ಒಂದು ವೇಳೆ ಈಶ್ವರಪ್ಪನವರಿಗೆ ಟಿಕೆಟ್ ನೀಡದೆ ರಾಯಣ್ಣ ಬ್ರಿಗೇಡ್‍ನಲ್ಲಿ ಗುರುತಿಸಿಕೊಂಡಿರುವ ಅವರ ಬೆಂಬಲಿಗರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ಲಾಭ ಇಲ್ಲವೇ ಹಿನ್ನಡೆಯಾಗಬಹುದೆಂಬುದರ ಬಗ್ಗೆಯೂ ಅಮಿತ್ ಷಾ ಯಡಿಯೂರಪ್ಪ ಮತ್ತು ಪ್ರಹ್ಲಾದ್ ಜೋಷಿ ಅವರಿಂದ ಮಾಹಿತಿ ಪಡೆದಿದ್ದಾರೆ.
ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು ಎಂಬುದನ್ನು ಸರ್ವೇ ಆಧಾರದ ಮೇಲೆ ನಿರ್ಧಾರ ಮಾಡಲಾಗುವುದು. ಟಿಕೆಟ್ ಕೈ ತಪ್ಪಿದವರು ಬಂಡಾಯ ಏಳುವುದು ಇಲ್ಲವೇ ಪಕ್ಷ ಬಿಟ್ಟು ಹೋಗದಂತೆ ಎಚ್ಚರಿಕೆ ಹೆಜ್ಜೆ ಇಡಬೇಕೆಂದು ಅಮಿತ್ ಷಾ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮುಗಿದ ಅಧ್ಯಾಯ:

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ಯಡಿಯೂರಪ್ಪ -ಈಶ್ವರಪ್ಪ ನಡುವೆ ಇದ್ದ ಭಿನ್ನಮತ ಮುಗಿದ ಅಧ್ಯಾಯ. ಪಕ್ಷದಲ್ಲಿದ್ದ ಸಣ್ಣಪುಟ್ಟ ಗೊಂದಲಗಳು ನಿವಾರಣೆಯಾಗಿವೆ.
ಸಹೋದರರ ನಡುವೆ ಸಣ್ಣಪುಟ್ಟ ಗೊಂದಲಗಳು ಇರುತ್ತವೆ. ಇದನ್ನೇ ದೊಡ್ಡದು ಮಾಡುವ ಅಗತ್ಯವಿಲ್ಲ. ಬಿಜೆಪಿಯಲ್ಲಿ ಭಿನ್ನಮತಕ್ಕೆ ಅವಕಾಶವೇ ಇಲ್ಲ ಎಂದು ಪುನರುಚ್ಚರಿಸಿದರು.

ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರ ಹಿಡಿದೇ ತೀರುತ್ತೇವೆ. ಕಾಂಗ್ರೆಸ್‍ನ ದುರಾಡಳಿತವೇ ನಮಗೆ ವರದಾನವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ನಾನು ಈಗಲೂ ಆಕಾಂಕ್ಷಿ:
ಮತ್ತೊಂದೆಡೆ ಜಿಲ್ಲಾಧ್ಯಕ್ಷ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ರುದ್ರೇಗೌಡ ಮಾತನಾಡಿ, ನಾನು ಈಗಲೂ ಈ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ವರಿಷ್ಠರು ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ದ ಎಂದು ಹೇಳಿದರು.
ನಿನ್ನೆ ರಾತ್ರಿ ಈಶ್ವರಪ್ಪ ಕರೆದಿದ್ದ ಭೋಜನಕೂಟಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಬೆಳಗ್ಗಿನಿಂದ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ಕಾರಣ ಹೋಗಿರಲಿಲ್ಲ. ಇದಕ್ಕೆ ಯಾವುದೇ ರೀತಿಯ ರಾಜಕೀಯ ಕಾರಣ ಕಲ್ಪಿಸಬಾರದೆಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ