ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸ್ವಾಗ

ಬೆಂಗಳೂರು,ಮಾ.27-ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸ್ವಾಗತಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಆಯೋಗದ ಕ್ರಮವನ್ನು ಸ್ವಾಗತಿಸಿದ್ದಾರೆ.
ಯಾವುದೇ ಸಂದರ್ಭದಲ್ಲೂ ಚುನಾವಣೆ ಎದುರಾದರೆ ಅದನ್ನು ಎದುರಿಸಲು ಪಕ್ಷ ಸಜ್ಜಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕೆಂಬುದೇ ನಮ್ಮ ಮುಖ್ಯ ಉದ್ದೇಶ ಎಂದು ಜೆಡಿಎಸ್ ವರಿಷ್ಠರಾಗಿರುವ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

ಆಯೋಗ ದಿನಾಂಕ ಘೋಷಣೆ ಮಾಡಿರುವುದನ್ನು ನಮ್ಮ ಪಕ್ಷ ಮುಕ್ತವಾಗಿ ಸ್ವಾಗತಿಸುತ್ತದೆ. ಚುನಾವಣೆಗೆ ನಾವು ಈಗಾಗಲೇ ಎಲ್ಲ ರೀತಿಯ ಸಿದ್ದತೆಗಳನ್ನು ಪೂರ್ಣಗೊಳಿಸಿದ್ದೇವೆ. ಆಯೋಗ ದಿನಾಂಕ ನಿಗದಿ ಮಾಡಿರುವುದು ನಮಗೆ ಸಂತಸ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪ್ರತಿಕ್ರಿಯಿಸಿದ್ದಾರೆ.
ನಾವು ಚುನಾವಣೆಗೆ ಹೆದರುವುದಿಲ್ಲ. ಈಗಾಗಲೇ ರಾಜ್ಯಾದ್ಯಂತ ಪ್ರಚಾರ ನಡೆಸಿ ಮತದಾರರ ನಾಡಿಮಿಡಿತ ಅರಿಯುವ ಪ್ರಯತ್ನ ಮಾಡಿದ್ದೇವೆ. ನಮಗೆ ಎಂಥ ಸಂದರ್ಭ ಬಂದರೂ ಅದನ್ನು ಧೈರ್ಯದಿಂದ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೂಡ ಆಯೋಗದ ಕ್ರಮವನ್ನು ಪಕ್ಷ ಸ್ವಾಗತಿಸುತ್ತದೆ. ಕಾಂಗ್ರೆಸ್ ಈ ವಿಧಾನಸಭೆ ಚುನಾವನೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡ ನಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿ ವಿಧಾನಸಭೆ ಚುನಾವಣೆಯನ್ನು ಎದುರಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುತ್ತೇವೆ.

ಮಿಷನ್ 150 ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ. ಇಂದಿನಿಂದ ಇನ್ನಷ್ಟು ಆತ್ಮವಿಶ್ವಾಸದಿಂದ ಪ್ರಚಾರ ನಡೆಸುವುದಾಗಿ ಹರ್ಷ ವ್ಯಕ್ತಪಡಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೂಡ ಆಯೋಗದ ಕ್ರಮವನ್ನು ಸ್ವಾಗತಿಸಿದ್ದಾರೆ. ನಾವು ಬಿಜೆಪಿ ಅಥವಾ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸಿ ಸ್ವಂತ ಬಲದಲ್ಲೇ ಅಧಿಕಾರ ಹಿಡಿಯುತ್ತೇವೆ. ಫಲಿತಾಂಶದವರೆಗೂ ಕಾದು ನೋಡಿ ಎಂದು ಸೂಚ್ಯವಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ