ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ 28-ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಏಪ್ರಿಲ್ 15 ರೊಳಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಯಾರಿಗೆ ಟಿಕೆಟ್ ನೀಡಬೇಕು, ಯಾವ ಮಾನದಂಡದಡಿ ಟಿಕೆಟ್ ನೀಡಬೇಕು ಎಂಬ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡಿದ್ದು,
ಹೈಕಮಾಂಡ್‍ಗೆ ಕಳುಹಿಸಿಕೊಡಲಾಗಿದೆ. ಏ.9 ಮತ್ತು 10 ರಂದು ಹೈಕಮಾಂಡ್ ಪರಿಶೀಲನಾ ಸಮಿತಿ ಸಭೆ ನಡೆಸಿ ಏ.15ಕ್ಕೆ ಅಂತಿಮ ಪಟ್ಟಿ ಏಕಕಾಲದಲ್ಲಿ ಪ್ರಕಟಿಸಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಹಾಗೂ ಚುನಾವಣಾ ಸಮಿತಿ ಸದಸ್ಯರು ಸೇರಿದಂತೆ ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ಕ್ಷೇತ್ರದ ಹಾಗೂ ಅಭ್ಯರ್ಥಿಗಳ ಗೆಲುವಿನ ಸಾಧಕ-ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ಆಕಾಂಕ್ಷಿಗಳು ಹೆಚ್ಚಾಗಿರುವುದರಿಂದ ಹಲವು ಕ್ಷೇತ್ರಗಳಲ್ಲಿ ಎರಡೆರಡು ಹೆಸರುಗಳನ್ನು ಹೈಕಮಾಂಡ್‍ಗೆ ಕಳುಹಿಸಲಾಗಿದೆ.
ಪರಿಶೀಲನಾ ಸಮಿತಿ ಈ ಪಟ್ಟಿಯನ್ನು ಸದ್ಯದಲ್ಲಿಯೇ ಫೈನಲ್ ಮಾಡಲಿದೆ. ಈ ಬಾರಿ ಬಹುತೇಕ 224 ಕ್ಷೇತ್ರಗಳಿಗೆ ಏಕಕಾಲದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಅಶೋಕ್ ಖೇಣಿಗೆ ಟಿಕೆಟ್ ನೀಡುವ ಬಗ್ಗೆ ಯಾವುದೇ ವಿರೋಧ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಯಾವುದೇ ಹಾಲಿ ಶಾಸಕರನ್ನು ಕೈಬಿಟ್ಟಿಲ್ಲ. ಎಲ್ಲರನ್ನೂ ಹೈಕಮಾಂಡ್‍ಗೆ ಶಿಫಾರಸು ಮಾಡುತ್ತೇವೆ. ಶ್ಯಾಮನೂರು, ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹೆಸರನ್ನೂ ಕೂಡ ಕಳುಹಿಸಿದ್ದೇವೆ. ಅಶೋಕ್ ಖೇಣಿ ಅವರ ಹೆಸರನ್ನೂ ಕಳುಹಿಸುತ್ತೇವೆ ಎಂದರು.

ಕಳೆದ ಬಾರಿ ಸೋತ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಿದ್ದೇವೆ. ಇಂದು ಹಾಲಿ ಶಾಸಕರ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನು ಮತ್ತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಪರಿಶೀಲನಾ ಸಮಿತಿಯವರು ಪ್ರತ್ಯೇಕ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸುತ್ತಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ