ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು-ಬಿ.ಎಸ್.ಯಡಿಯೂರಪ್ಪ ಮಾತುಕತೆ

ಬೆಂಗಳೂರು, ಮಾ.29-ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್‍ವೈ ನಿವಾಸಕ್ಕೆ ಬೆಳಿಗ್ಗೆ ಆಗಮಿಸಿದ ಬೇಳೂರು, ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಇಬ್ಬರ ನಡುವೆ ಮಾತಿನ ವಿವರಗಳು ಲಭ್ಯವಾಗಿಲ್ಲವಾದರೂ ಸಾಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಬೇಳೂರು, ಟಿಕೆಟ್ ಕೈ ತಪ್ಪಿದರೆ ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿತ್ತು.

ಮೂರು ದಿನಗಳ ಹಿಂದೆಯಷ್ಟೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಭಿನ್ನಮತಕ್ಕೆ ಅವಕಾಶ ವಿಲ್ಲದಂತೆ ನೋಡಿಕೊಳ್ಳಬೇಕೆಂದು ರಾಜ್ಯ ನಾಯಕರಿಗೆ ಸೂಚಿಸಿದ್ದರು.
ಇದರ ಬೆನ್ನಲ್ಲೇ ಇಂದು ಬೇಳೂರು ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹೊಸ ಬೆಳವಣಿಗೆಯಾಗಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ನಾಯಕರ ಸೂಚನೆಯಂತೆ ನಾನು ನಮ್ಮ ಅಧ್ಯಕ್ಷರಾದ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಪಕ್ಷದಲ್ಲಾಗಲಿ ಅಥವಾ ಸಾಗರದಲ್ಲಾಗಲಿ ಯಾವುದೇ ರೀತಿಯ ಭಿನ್ನಮತ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಾಗರದಿಂದ ಯಾರಿಗೇ ಟಿಕೆಟ್‍ಕೊಟ್ಟರೂ ಅವರ ಪರವಾಗಿ ನಾನು ಕೆಲಸ ಮಾಡಲು ಸಿದ್ಧನಿದ್ದೇನೆ. ಇಲ್ಲಿ ಹರತಾಳ ಹಾಲಪ್ಪ ಇಲ್ಲವೆ, ಬೇಳೂರು ಮುಖ್ಯವಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಯಡಿಯೂರಪ್ಪ ನವರು ಮುಖ್ಯಮಂತ್ರಿಯಾಗಬೇಕು. ಅದಕ್ಕಾಗಿ ನಾವು ಎಲ್ಲಾ ರೀತಿಯ ತ್ಯಾಗಕ್ಕೆ ಸಿದ್ಧನಿದ್ದೇನೆ ಎಂದು ಹೇಳಿದರು.
ಸಾಗರದಿಂದ ಈ ಬಾರಿ ಬೇಳೂರು ಗೋಪಾಲಕೃಷ್ಣ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಈ ಕ್ಷೇತ್ರಕ್ಕೆ ಮಾಜಿ ಸಚಿವ ಹರತಾಳ ಹಾಲಪ್ಪ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಪಕ್ಕದ ಸೊರಬದಿಂದ ಮಾಜಿ ಸಚಿವ ಕುಮಾರಬಂಗಾರಪ್ಪ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದು ಬೇಳೂರಿಗೆ ತೊಡರುಗಾಲಾಗಿ ಪರಿಣಮಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ