ಕಾಂಗ್ರೆಸ್ ಪಕ್ಷದಿಂದ ಶಾಸಕ ಮಾಲೀಕಯ್ಯ ಗುತ್ತೇದಾರ್ ಉಚ್ಚಾಟನೆ-ಬಿಜೆಪಿ ಸೇರಲು ನಿರ್ಧಾರ

 

ಬೆಂಗಳೂರು : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ವೆಂಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವುದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಇಂದು ಮಧ್ಯಾಹ್ನವಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಅಫ್ಜಲಪುರ ಶಾಸಕ ಗುತ್ತೇದಾರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದರು. ಅಲ್ಲದೆ, ಬಿಜೆಪಿ ಸೇರ್ಪಡೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಾ.30ರಂದು ಮೈಸೂರಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿ.ಪರಮೇಶ್ವರ್, ಗುತ್ತೇದಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಶಾಸಕ ಗುತ್ತೇದಾರ್ ನಿರ್ಧಾರ

ಈಡಿಗ ಸಮುದಾಯಕ್ಕೆ ಸೇರಿದ ಗುತ್ತೀದಾರ್ ಅವರು 1985, 1989, 1994, 1999, 2008, 2013 ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಅಫಜಲಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದಾರೆ. 2013ರಲ್ಲಿ ಗುತ್ತೇದಾರ್ 5,238 ಮತಗಳ ಅಂತರದಿಂದ ಜಯಗಳಿಸಿದ್ದರು. ಗುತ್ತೇದಾರ್ 38,093 ಮತಗಳನ್ನು ಪಡೆದಿದ್ದರೆ, ಕೆಜೆಪಿಯಿಂದ ಸ್ಪರ್ಧಿಸಿದ್ದ ಎಂ.ವೈ.ಪಟೀಲ್ 32,855 ಮತಗಳನ್ನು ಪಡೆದಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ