ಬೆಂಗಳೂರು, ಮಾ.30-ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮುಂದಿನ ವಾರ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಚುನಾವಣಾ ತಂತ್ರ ರೂಪಿಸಿರುವ ಜೆಡಿಎಸ್ ಮತದಾರರನ್ನು ಆಕರ್ಷಿಸಲು ನಾನಾ ರೀತಿಯ ಪ್ರಚಾರವನ್ನು ಈಗಾಗಲೇ ಆರಂಭಿಸಿದೆ.
ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಪ್ರಯತ್ನಪಟ್ಟು ಅಧಿಕಾರಕ್ಕೆ ಬರಲೇಬೇಕೆಂಬ ಉದ್ದೇಶದಿಂದ ಜೆಡಿಎಸ್ ವರಿಷ್ಠರು ಬಿಡುವಿಲ್ಲದ ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ಘೋಷಣೆಯಾಗದೆ ಉಳಿದಿರುವ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ.
ರಾಷ್ಟ್ರೀಯ ಪಕ್ಷಗಳಿಗಿಂತ ಮುಂಚಿತವಾಗಿ ಜೆಡಿಎಸ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದಿಂದ ಬೆಂಗಳೂರಿಗೆ ಮರಳಿದ ನಂತರ ಬಾಕಿ ಇರುವ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮೊದಲ ಹಂತದ ಪಟ್ಟಿಯಲ್ಲಿ 126 ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿದ್ದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಈಗಾಗಲೇ ಬಿಜೆಪಿ ಸೇರಿದ್ದು, ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ಪರ್ಯಾಯ ಅಭ್ಯರ್ಥಿಯನ್ನು ಜೆಡಿಎಸ್ ಕಣಕ್ಕಿಳಿಸಲಿದೆ.
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮೀನಾಮೇಷ ಎಣಿಸುತ್ತಿರುವಾಗಲೇ ಜೆಡಿಎಸ್ ಎರಡನೇ ಹಂತದ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುತ್ತಿದೆ. ಮುಂದಿನ ವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಪಕ್ಷದ ಹಿರಿಯ ನಾಯಕರು ಸಮಾಲೋಚನೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.
ಬೆಂಗಳೂರು ಸೇರಿದಂತೆ ಸುಮಾರು 79 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಜೆಡಿಎಸ್ ಮಾಡಬೇಕಿದೆ. ಈಗಾಗಲೇ ಬಿಎಸ್ಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, 20 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಸಮಾಜವಾದಿ ಪಕ್ಷದ ಜೊತೆಯೂ ಮೈತ್ರಿ ಮಾಡಿಕೊಳ್ಳಲು ಸಿದ್ದವಿದೆ. ಈಗಾಗಲೇ ಎನ್ಸಿಪಿ ಜೊತೆ ಮೊದಲ ಹಂತದ ಮಾತುಕತೆ ಕೂಡ ನಡೆದಿತ್ತು. ಆದರೆ ಎನ್ಸಿಪಿ ಜೊತೆಗಿನ ಮೈತ್ರಿ ಕುರಿತಂತೆ ಹೆಚ್ಚಿನ ಬೆಳವಣಿಗೆಗಳು ಉಭಯ ಪಕ್ಷಗಳ ನಡುವೆ ನಡೆದಿಲ್ಲ. ಈಗಾಗಲೇ ಚುನಾವಣಾ ವೇಳಾ ಪಟ್ಟಿ ಪ್ರಕಟವಾಗಿದ್ದು, ಅಧಿಸೂಚನೆ ಮುಂದಿನ ತಿಂಗಳು ಹೊರಬೀಳಲಿದೆ. ಅಷ್ಟರಲ್ಲಿ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈಗಾಗಲೇ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಒಂದೆರಡು ಬದಲಾವಣೆಯಾಗುವ ಸಾಧ್ಯತೆಗಳಿವೆ. ಆದರೆ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಬದಲಾವಣೆ ಇಲ್ಲ. ಪಕ್ಷ ತೊರೆದ ಶಾಸಕರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಈಗಾಗಲೇ ಸಿದ್ಧಪಡಿಸಿದೆ.
ಕೆಲವೊಂದು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ತೀವ್ರ ಪೈಪೆÇೀಟಿ ಇರುವುದರಿಂದ ಅಂತಹ ಕ್ಷೇತ್ರಗಳ ಅಭ್ಯರ್ಥಿಯನ್ನು ಕೊನೆ ಗಳಿಗೆಯಲ್ಲಿ ಪ್ರಕಟಿಸುವ ಸಾಧ್ಯತೆ ಹೆಚ್ಚಾಗಿದೆ.