ಮೈಸೂರು, ಮಾ.31- ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಜನರಿಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವರಣಾ ಕ್ಷೇತ್ರದಿಂದ ಡಾ.ಯತೀಂದ್ರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಬಿಎಸ್ವೈ ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಪತ್ರಕರ್ತರ ಪ್ರಶ್ನೆಗೆ ಸಿಎಂ ನೇರವಾಗಿ ಕಮಲ ಪಡೆಗೆ ಟಾಂಗ್ ನೀಡಿದ್ದಾರೆ.
ಒಳ್ಳೆ ಕೆಲಸ ಮಾಡಿದವರನ್ನು ಜನರು ಆಶೀರ್ವದಿಸುತ್ತಾರೆ ಎಂಬ ನಂಬಿಕೆ ನನ್ನದು. ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಅದನ್ನು ತಡೆಯಲು ಸಾಧ್ಯವಿಲ್ಲ ಎಂದರು.
ಸರ್ಕಾರದ ಜನಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರದ ಪ್ರತಿ ಗ್ರಾಮಕ್ಕೂ ತೆರಳಿ ಜನರೊಂದಿಗೆ ನೇರವಾಗಿ ಸಂವಾದ ನಡೆಸುತ್ತೇನೆ. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ಮತಾಂಧ. ಅವರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಸಂವಿಧಾನದ ಬಗ್ಗೆ ಗೌರವ ಕೊಡದವರಿಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ರಿಲ್ಯಾಕ್ಸ್ ಮೂಡ್ನಲ್ಲಿ ಸಿಎಂ:
ಚುನಾವಣಾ ನೀತಿಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಯಾವುದೇ ಕೆಲಸ ಕಾರ್ಯಗಳಿಲ್ಲದೆ ರಿಲ್ಯಾಕ್ಸ್ ಮೂಡ್ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಡೀಪುರ ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆದು ಇಂದು ಬೆಳಗ್ಗೆ ಮೈಸೂರಿಗೆ ಆಗಮಿಸಿದರು.
ನಗರದ ಆರ್ಟಿಒ ವೃತ್ತದ ಬಳಿಯ ಹೋಟೆಲ್ವೊಂದರಲ್ಲಿ ಉಪಹಾರ ಸೇವಿಸಿ ಅಲ್ಲಿಂದ ಹುಟ್ಟೂರಿಗೆ ತೆರಳಿದರು.