ನವದೆಹಲಿ, ಏ.1-ಶತಮಾನದ ಸಂತ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ವಿಶ್ವಮಾನ್ಯರಾದ ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮಜಯಂತಿ ಅಂಗವಾಗಿ ದೇಶ-ವಿದೇಶಗಳ ಗಣ್ಯಾತಿಗಣ್ಯರು ಶುಭಕೋರಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಶ್ರೀಗಳು ಸಾಮಾಜಿಕ, ಆಧ್ಯಾತ್ಮಿಕ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ನೀಡಿರುವ ಅಪಾರ ಕೊಡುಗೆಗಳ ಗುಣಗಾನ ಮಾಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ.ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿಗಳಾದ ಡಾ. ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ನಾಯಕರು ಶ್ರೀಗಳ 111ನೆ ಜನ್ಮ ಜಯಂತಿ ಶುಭಾಶಯ ಕೋರಿದ್ದಾರೆ. ಶತಾಯುಷಿ ಸ್ವಾಮೀಜಿ ಈ ವಯಸ್ಸಿನಲ್ಲೂ ಸಕ್ರಿಯವಾಗಿ ಸಾಮಾಜಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಕೈಂಕರ್ಯಗಳಲ್ಲಿ ತೊಡಗಿರುವುದನ್ನು ಗಣ್ಯಾತಿಗಣ್ಯ ಕೊಂಡಾಡಿದ್ದಾರೆ.