ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಏ.1-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗಬೇಕೆಂಬುದು ಅವರ ಮಗನಾಗಿ ನನ್ನ ಆಸೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದೆ. ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರದ ಉತ್ತಮ ಯೋಜನೆಗಳಿಗೆ ಜನ ಮತ್ತೊಮ್ಮೆ ಬೆಂಬಲ ನೀಡುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಕಾಂಗ್ರೆಸ್‍ನಲ್ಲಿ ಅತ್ಯಂತ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗಬೇಕೆಂಬುದು ಮಗನಾಗಿ ನನ್ನ ಆಸೆ. ನನ್ನಂತೆಯೇ ತುಂಬಾ ಜನ ನಿರೀಕ್ಷೆ ಹೊಂದಿದ್ದಾರೆ. ಹಾಗೆಂದ ಮಾತ್ರಕ್ಕೆ ಪಕ್ಷಕ್ಕೆ ವಿರುದ್ಧವಾಗಿ ಮಾತನಾಡುತ್ತಿದ್ದೇನೆ ಎಂದು ಭಾವಿಸಬೇಕಿಲ್ಲ. ನನ್ನ ಅಭಿಪ್ರಾಯ ಹೇಳಿದ್ದೇನೆ. ಅಂತಿಮ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್‍ನ ಅತ್ಯಂತ ಹಿರಿಯ ನಾಯಕರಾಗಿದ್ದು, ಕಳೆದ ಬಾರಿ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಕೂದಲೆಳೆಯ ಅಂತರದಲ್ಲಿ ತಪ್ಪಿತ್ತು. ಕಳೆದ ಐದು ವರ್ಷಗಳಿಂದಲೂ ತಮಗೆ ಅವಕಾಶ ಸಿಕ್ಕರೂ ಖರ್ಗೆ ಅವರು ಎಂದೂ ಕೂಡ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭಿನ್ನಮತದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೆ ಪಕ್ಷನಿಷ್ಠೆಯನ್ನು ಮೆರೆದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾವೇ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವ ವೇಳೆ ಮತ್ತೆ ದಲಿತ ಮುಖ್ಯಮಂತ್ರಿಯ ಕೂಗು ಕೇಳಿಬರಲಾರಂಭಿಸಿದೆ.
ಕಾಂಗ್ರೆಸ್‍ನಲ್ಲಿ ಹಲವಾರು ಶಾಸಕರು, ಮುಖಂಡರು ಖರ್ಗೆ ಅವರ ಪರವಾಗಿ ಬ್ಯಾಟಿಂಗ್ ಮಾಡಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಅವಕಾಶ ನೀಡಬೇಕೆಂದು ಹೈಕಮಾಂಡ್‍ನ್ನು ಒತ್ತಾಯಿಸಿದ್ದಾರೆ. ಈ ಹಂತದಲ್ಲಿ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಸೋಲಿಲ್ಲದೆ ಸತತವಾಗಿ ಶಾಸನಸಭೆಗಳಿಗೆ ಆಯ್ಕೆಯಾಗುತ್ತಿರುವ ಖರ್ಗೆ ಅವರು ಈ ರಾಜ್ಯಕ್ಕೆ ಒಮ್ಮೆ ಮುಖ್ಯಮಂತ್ರಿಯಾಗಬೇಕೆಂಬುದು ದಲಿತ ಮುಖಂಡರ ಹಾಗೂ ಕಾಂಗ್ರೆಸ್ ನಿಷ್ಠರ ಆಶಯವಾಗಿದೆ.

ತಮ್ಮ ಅಭಿಪ್ರಾಯವನ್ನು ಎಂ.ವಿ.ರಾಜಶೇಖರನ್ ಅವರಂತಹ ಹಿರಿಯ ನಾಯಕರು ಬಹಿರಂಗವಾಗಿಯೂ ವ್ಯಕ್ತಪಡಿಸಿದ್ದಾರೆ. ಕಳೆದ 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿತ್ತು. ಸರ್ಕಾರ ಅಸ್ತಿತ್ವಕ್ಕೆ ಬಂದ ಆರೇಳು ತಿಂಗಳಲ್ಲೇ ದಲಿತ ಮುಖ್ಯಮಂತ್ರಿ ಕೂಗು ದನಿಯೆತ್ತಿತ್ತು. ಆದರೆ ಆ ಸಂದರ್ಭದಲ್ಲೂ ಅದೇ ಸಮುದಾಯ ಎಚ್.ಸಿ.ಮಹದೇವಪ್ಪ, ಆಂಜನೇಯ ಅವರಂತಹ ಸಚಿವರು ಮಧ್ಯೆಪ್ರವೇಶಿಸಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದರು. ಈಗ ಚುನಾವಣೆಗೂ ಮುನ್ನವೇ ದಲಿತ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ