ಪೌರಕಾರ್ಮಿಕರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂಬ ಬಿಜೆಪಿ ಆರೋಪ ಸತ್ಯಕಕೆ ದೂರವಾದದ್ದು: ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಹೇಳಿಕೆ

ಬೆಂಗಳೂರು, ಏ.3-ಪೌರಕಾರ್ಮಿಕರ ಹಿತಾಸಕ್ತಿಗಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳ ಕ್ರಮಕೈಗೊಂಡಿದ್ದರೂ ಸಹ ಪೌರಕಾರ್ಮಿಕರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಪೌರಕಾರ್ಮಿಕರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿ ಅವರ ಜೀವನಮಟ್ಟವನ್ನು ಸುಧಾರಿಸಿದ್ದಾರೆ.

ಇದುವರೆಗೂ ರಾಜ್ಯದಲ್ಲಿ ಅಧಿಕಾರ ನಡೆಸಿರುವ ಯಾವ ಮುಖ್ಯಮಂತ್ರಿ ಕೂಡ ಜಾರಿ ಮಾಡಿದ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದರು.
ಭಾರತದೇಶದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಪದ್ಧತಿ ರದ್ದುಗೊಳಿಸಿದ್ದಾರೆ. ಗುತ್ತಿಗೆದಾರರ ಶೋಷಣೆಯನ್ನು ಮುಕ್ತಗೊಳಿಸಿ ನೇರವಾಗಿ ವೇತನ ಪಾವತಿಯಾಗುವಂತೆ ಮಾಡಿದ್ದಾರೆ. ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸರ್ಕಾರವಿದ್ದಾಗ ತಿಂಗಳ ಸಂಬಳ 7,800 ರೂ. ನೀಡಲಾಗುತ್ತಿತ್ತು. ಆದರೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ 17,850 ರೂ. ನೀಡಲಾಗುತ್ತಿದೆ ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಸುಮಾರು 11,800 ಪೌರಕಾರ್ಮಿಕರ ಹುದ್ದೆಗಳಿಗೆ ಗುತ್ತಿಗೆ ಪೌರಕಾರ್ಮಿಕರನ್ನು ನೇಮಕ ಮಾಡಲು ಆದೇಶ ಮಾಡಲಾಗಿತ್ತು. ಈಗ ಅದನ್ನು ಜಾರಿಗೆ ತರಲಾಗಿದೆ. ಇನ್ನು ಉಳಿದಂತೆ ಅನೇಕ ಯೋಜನೆಗಳನ್ನು ಪೌರಕಾರ್ಮಿಕರಿಗೆ ಜಾರಿ ಮಾಡಿದರೂ ಸಹ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಚುನಾವಣಾ ಗಿಮಿಕ್‍ಗಾಗಿ ಸುಳ್ಳು ಹೇಳಿಕೆಗಳನ್ನು ನೀಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಯಾರೂ ಕಿವಿಗೊಡಬಾರದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ