ದಿನದಿಂದ ದಿನಕ್ಕೆ ರಂಗೇರಿದ ಚುನಾವಣಾ ಕಣ

 

ಬೆಂಗಳೂರು, ಏ.3-ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರತೊಡಗಿದೆ. ಕೇಂದ್ರದ ಘಟಾನುಘಟಿ ನಾಯಕರು ರಾಜ್ಯದಲ್ಲಿ ಚುನಾವಣಾ ಅಖಾಡಕ್ಕಿಳಿದು ಪ್ರಚಾರ ಕಾರ್ಯದಲ್ಲಿ ಬ್ಯುಜಿಯಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಬಾದಾಮಿ ಶಿವಯೋಗಿ ಮಂದಿರದಲ್ಲಿ ಮಠಾಧೀಶರೊಂದಿಗೆ ಸಂವಾದ, ಕಾಗಿನೆಲೆಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಂಡರು. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಬಿಎಸ್‍ವೈ ತವರು ನೆಲ ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ಇತ್ತ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ವಿಕಾಸಪರ್ವ ಯಾತ್ರೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.
ಮೂರೂ ಪಕ್ಷಗಳವರು ಮುಗಿಬಿದ್ದು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ನವದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದ ರಾಹುಲ್‍ಗಾಂಧಿ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಿ, ಶಿವಮೊಗ್ಗದಲ್ಲಿ ರೋಡ್‍ಶೋ ನಡೆಸಿದ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

ನಂತರ ಶಿವಮೊಗ್ಗದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್‍ಗಾಂಧಿ ಅವರು ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ಪ್ರಧಾನಿ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿ ಅವರು ಕರ್ನಾಟಕಕ್ಕೆ ಬಂದು ಮಾತನಾಡುವಾಗ ಭ್ರಷ್ಟಾಚಾರ ಆರೋಪ ಹೊತ್ತಿರುವ ಯಡಿಯೂರಪ್ಪ ಹಾಗೂ ಮಾಜಿ ಮಂತ್ರಿಗಳು ಪಕ್ಕದಲ್ಲಿರುತ್ತಾರೆ. ಕನಿಷ್ಟ ಅವರನ್ನು ವೇದಿಕೆಯಿಂದ ಕೆಳಗಿಳಿಸಿ ಮಾತನಾಡಿ ಎಂದು ಹೇಳಿದರು.

ರೆಫಲ್ ಯುದ್ಧ ವಿಮಾನ ಖರೀದಿ, ಅಮಿತ್ ಷಾ ಅವರ ಪುತ್ರ ಜೈನ್ ಷಾ ಅವರ ಸಂಪರ್ಕ ವೃದ್ಧಿ ಹಗರಣ, ಜೇಟ್ಲಿ ವಿಚಾರಗಳನ್ನು ರಾಹುಲ್ ಪುನರ್ ಪ್ರಸ್ತಾಪಿಸಿದರು.
ಬಿಎಸ್‍ವೈ ಅವರ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ರಣಕಹಳೆಯನ್ನೇ ಮೊಳಗಿಸಿತ್ತು. ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಭಾರೀ ಜನಸ್ತೋಮ ನೆರೆದಿತ್ತು. ಯುವ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸಹಸ್ರಾರು ಜನ ಸೇರಿ ಶಕ್ತಿ ಪ್ರದರ್ಶನ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಇತ್ತ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ವೀರಶೈವ ಮಠಾಧೀಶರೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಸಂವಾದ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಅಸಮಾಧಾನಗೊಂಡಿರುವ ವೀರಶೈವ ಮಠಾಧೀಶರೊಂದಿಗೆ ಅಮಿತ್ ಷಾ ಅವರು ಸಂವಾದ ನಡೆಸಿದ್ದು ವಿಶೇಷವಾಗಿತ್ತು.

ಅಲ್ಲದೆ, ಕಾಗಿನೆಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶಕ್ಕೆ ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಭಾರೀ ಸಂಖ್ಯೆಯಲ್ಲಿ ಜನಸಾಗರ ಹರಿದುಬಂದಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಿಂದುಳಿದ ವರ್ಗಗಳ ಮುಖಂಡ ಕೆ.ಎಸ್.ಈಶ್ವರಪ್ಪ ಸೇರಿದಂತೆ ಅನೇಕ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಬೆಂಬಲಿಸುವಂತೆ ಕರೆ ನೀಡಿದರು.
ಐದು ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈ ಸರ್ಕಾರವನ್ನು ತೊಲಗಿಸಬೇಕೆಂದು ಹೇಳಿದರು.
ಇತ್ತ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ರಣಕಹಳೆ ಮೊಳಗಿಸಿದರು. ಜೆಡಿಎಸ್ ವಿಕಾಸ ಪರ್ವಕ್ಕೆ ಭಾರೀ ಸಂಖ್ಯೆಯಲ್ಲಿ ಜನಸಾಗರ ಹರಿದುಬಂದಿತ್ತು. ಶಾಸಕ ಯೋಗೀಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜೆಡಿಎಸ್ ಪಕ್ಷದ ವಿರುದ್ಧ ಹಗುರವಾಗಿ ಮಾತನಾಡುತ್ತಿರುವ ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ. ಜೆಡಿಎಸ್ ಪಕ್ಷ ಈ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ಮೇ 18ರಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬವಿದ್ದು, ಅಂದೇ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಗದ್ದುಗೆಗೇರಲಿದೆ ಎಂದು ಹೇಳಿದರು.

ಭಾರೀ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಯಾವ ತಂತ್ರವೂ ರಾಜ್ಯದಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನೆಲ ಕಚ್ಚಲಿದೆ. ಅಮಿತ್ ಷಾ ಅವರ ಯಾವ ತಂತ್ರವೂ ಇಲ್ಲಿ ನಡೆಯುವುದಿಲ್ಲ. ಪ್ರಾದೇಶಿಕ ಪಕ್ಷ ಜೆಡಿಎಸ್‍ಗೆ ಜನ ಮನ್ನಣೆ ನೀಡಲಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಜನರು ನಮ್ಮ ಪರವಾಗಿರುವುದು ಕಂಡುಬಂದಿದೆ. ಈ ಚುನಾವಣೆಯ ಫಲಿತಾಂಶದಿಂದ ಅದು ಸಾಬೀತಾಗಲಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ