ಬೆಂಗಳೂರು, ಏ.4-ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ದೇಶದ ಜನ ಘಾಸಿಗೊಳಗಾಗಿದ್ದಾರೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಇಂದಿಲ್ಲಿ ಒತ್ತಾಯಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿದೆ. ಸುಮಾರು 12 ಜನ ದಲಿತರು ಸಾವನ್ನಪ್ಪಿದ್ದಾರೆ. ಆದರೂ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ ಎಂದು ಆರೋಪಿಸಿದರು.
ಅಂಬೇಡ್ಕರ್ ಅವರಿಂದ ಪ್ರಧಾನಿಯಾದೆ ಎಂದು ಹೇಳುವ ನರೇಂದ್ರ ಮೋದಿ ಅವರು ಕೂಡಲೇ ವಿಶೇಷ ಅಧಿವೇಶನ ಕರೆದು ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಸುಪ್ರೀಂಕೊರ್ಟ್ಗೆ ಈ ಕಾಯ್ದೆಯ ಬಗ್ಗೆ ಮನವರಿಕೆ ಮಾಡಿಕೊಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇವರ ಸಚಿವ ಸಂಪುಟದಲ್ಲಿರುವ ಸಚಿವರೇ ಸಂವಿಧಾನ ಬದಲಾವಣೆ ಮಾಡುವ ಮಾತನಾಡಿದಾಗ ಯಾವುದೇ ಪ್ರತಿಕ್ರಿಯೆ ನೀಡದೆ ಪ್ರಧಾನಿ ಅವರು ನಿರ್ಲಿಪ್ತ ವಹಿಸುತ್ತಾರೆ. ಇನ್ನು ಎಸ್ಸಿ/ಎಸ್ಟಿ ಅವರ ಬಗ್ಗೆ ಕಾಳಜಿ ವಹಿಸುತ್ತಾರೆಯೇ ಎಂದು ಪ್ರಶ್ನಿಸಿದರು.