ನೀತಿ-ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಿ

ಬೆಂಗಳೂರು, ಏ.5- ನೀತಿ-ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಿ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಿ ಎಂದು ಪೆÇಲೀಸ್ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳಿಗೆ ಚುನಾವಣಾ ಆಯುಕ್ತರು ಖಡಕ್ ಸೂಚನೆ ನೀಡಿದರು.
ವಿಕಾಸಸೌಧದಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ಒ.ಪಿ.ರಾವತ್, ಚುನಾವಣಾ ಆಯುಕ್ತರಾದ ಅಶೋಕ್ ಲಾವಸ, ಉಮೇಶ್ ಸಿನ್ಹ, ಸುದೀಪ್ ಸಕ್ಸೇನಾ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಅವರು ಪ್ರಾದೇಶಿಕ ಆಯುಕ್ತರು, ಐಜಿಪಿ, ಬಿಬಿಎಂಪಿ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೆÇಲೀಸ್ ಅಧಿಕಾರಿಗಳೊಂದಿಗೆ ಚುನಾವಣೆ ಭದ್ರತೆ ಸಿದ್ಧತೆ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.

ನಿಷ್ಪಕ್ಷಪಾತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವಂತಹ ವಾತಾವರಣ ಇರಬೇಕು. ನಿರ್ಭೀತಿಯಿಂದ ಮತದಾನವಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡಿಕೊಡಬೇಕು. ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಅಧಿಕಾರಿಗಳು ಯಾರ ಪರವಾಗಿಯೂ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ವಿಕಲಚೇತನರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕು. ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಬೇಕು. ಹಣ ಜಪ್ತಿಯಾದ ಕೂಡಲೇ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಪೆÇಲೀಸ್ ಅಧಿಕಾರಿಗಳು ರಾಜಕೀಯ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರಬಾರದು. ಈ ಹಿಂದೆ ಇಂತಹ ಹಲವು ಪ್ರಕರಣಗಳು ಗಮನಕ್ಕೆ ಬಂದಿದ್ದು, ಅವುಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

ಹಿಂದಿನ ಕಹಿ ಘಟನೆಗಳನ್ನು ನೆನೆಸಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಶಾಂತಿ ಕದಡುವಂತಹ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಬೇಕು. ಕ್ರಿಮಿನಲ್‍ಗಳ ಮೇಲೆ ತೀವ್ರ ನಿಗಾ ಇಡಬೇಕು. ಜಾಮೀನು ರಹಿತ ವಾರೆಂಟ್ ಇರುವವರನ್ನು ಬಂಧಿಸಬೇಕು ಎಂದು ಚುನಾವಣಾಧಿಕಾರಿಗಳು ತಾಕೀತು ಮಾಡಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಡದಂತೆ ಎಚ್ಚರ ವಹಿಸಬೇಕು. ರಾಜಕೀಯ ಪಕ್ಷಗಳ ನಡುವೆ ಸಂಘರ್ಷ ಉಂಟಾದರೆ ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಭಾಯಿಸಬೇಕು. ಎಲ್ಲ ರಾಜಕೀಯ ಪಕ್ಷಗಳಿಗೆ ಪ್ರಚಾರಕ್ಕೆ ಮುಕ್ತ ಅವಕಾಶ ನೀಡಬೇಕು. ಆದರೆ, ಪ್ರಚಾರ ನಿಯಮಾನುಸಾರವಾಗಿ ಇರಬೇಕು. ಧ್ವನಿವರ್ಧಕಗಳ ಬಳಕೆ ಬಗ್ಗೆ ನಿಗಾ ವಹಿಸಬೇಕು. ಚುನಾವಣೆ ನೀತಿ-ಸಂಹಿತೆ ಉಲ್ಲಂಘನೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಚುನಾವಣಾಧಿಕಾರಿಗಳು, ಪೆÇಲೀಸ್ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿ ಹಲವು ಸೂಚನೆ ನೀಡಿದ್ದಾರೆ.

ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಕಮಲ್‍ಪಂಥ್, ಬೆಂಗಳೂರು ಪೆÇಲೀಸ್ ಆಯುಕ್ತರಾದ ಸುನಿಲ್‍ಕುಮಾರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ