ಬೆಂಗಳೂರು, ಏ.6- ಕಾಂಗ್ರೆಸ್‍ನ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭವನ್ನು ರಾಜಧಾನಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿಸಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ.
ಏ.8ರಂದು ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸಮಾರೋಪ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.
ಇದಕ್ಕಾಗಿ 3 ಸಾವಿರಕ್ಕೂ ಹೆಚ್ಚು ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳನ್ನು ಪಡೆಯಲು ಮುಂದಾಗಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಜನಾಶೀರ್ವಾದ ಯಾತ್ರೆ ನಡೆಸಿ ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ, ಹಳೆ ಮೈಸೂರು, ಮಲೆನಾಡು ಮುಂತಾದ ಕಡೆ ನಡೆಸಿದ ಜನಾಶೀರ್ವಾದ ಯಾತ್ರೆ ಅದ್ಧೂರಿಯಾಗಿ ನಡೆದು ಯಶಸ್ವಿಯಾಗಿತ್ತು. ಹೋದೆಡೆಯಲ್ಲೆಲ್ಲ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಾಹುಲ್‍ಗಾಂಧಿ ಅವರ ಈ ಯಾತ್ರೆಗೆ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿತು.
ನಾಳೆಯಿಂದ ಬಯಲುಸೀಮೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಜನಾಶೀರ್ವಾದ ರ್ಯಾಲಿ ನಡೆಸಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಸಮಾರೋಪ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಇದರ ಯಶಸ್ಸಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಉಸ್ತುವಾರಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್, ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಸೀತಾರಾಂ, ಕೃಷ್ಣಭೆರೇಗೌಡ, ಎಂ.ಕೃಷ್ಣಪ್ಪ ಸೇರಿದಂತೆ ಎಲ್ಲ ಕಾಂಗ್ರೆಸ್ ಮುಖಂಡರು ಶ್ರಮಿಸುತ್ತಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಎಲ್ಲ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಜನಾಶೀರ್ವಾದ ಯಾತ್ರೆ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಈ ಹಿಂದೆ ನಡೆಸಿರುವ ಎಲ್ಲ ಜನಾಶೀರ್ವಾದ ಯಾತ್ರೆಗಳ ಯಶಸ್ಸು ಕಂಡಿರುವ ಕಾಂಗ್ರೆಸ್ ಪಕ್ಷ ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನಡೆಸುವ ಮೂಲಕ ಎದುರಾಳಿಗಳಿಗೆ ಸಡ್ಡು ಹೊಡೆಯಲು ಮುಂದಾಗಿರುವುದಲ್ಲದೆ, ಚುನಾವಣೆ ರಣಕಹಳೆ ಮೊಳಗಿಸಲಿದೆ.
ನಾಳೆ 10.45ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್‍ಗಾಂಧಿ ಅವರು ಹೆಲಿಕಾಫ್ಟರ್ ಮೂಲಕ ಮುಳಬಾಗಿಲಿಗೆ ತೆರಳಲಿದ್ದಾರೆ.
ಮುಳಬಾಗಿಲಿನ ಪ್ರಸಿದ್ಧ ಕುರುಡುಮಲೈ, ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಜಿಎಫ್‍ಗೆ ರಸ್ತೆ ಮೂಲಕ ತೆರಳಲಿದ್ದಾರೆ. ಕೆಜಿಎಫ್‍ನಿಂದ ಬಂಗಾರಪೇಟೆವರೆಗೆ ರೋಡ್ ಶೋ, ಬಂಗಾರಪೇಟೆಯಿಂದ ಕೋಲಾರ, ಕೋಲಾರದಲ್ಲಿ ಕಾರ್ನರ್ ಮೀಟಿಂಗ್, ಸಂಜೆ 5.30ಕ್ಕೆ ಕೋಲಾರದಿಂದ ಹೆಲಿಕಾಫ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಲಿರುವ ಅವರು ಚಿಕ್ಕಬಳ್ಳಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಆಗಮಿಸಿ ಏ.8ರಂದು ಬೆಳಗ್ಗೆ 10ಕ್ಕೆ ಸಫಾಯಿ ಕರ್ಮಚಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಉದ್ಯಮಿಗಳೊಂದಿಗೆ ಜ್ಞಾನಭಾರತಿ ಆಡಿಟೋರಿಯಂನಲ್ಲಿ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಜನಾಶೀರ್ವಾದ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.