
ಜೋಧಪುರ:ಏ-6: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷೆನ್ಸ್ ನ್ಯಾಯಾಲಯ ಪೂರ್ಣಗೊಳಿಸಿದ್ದು, ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.
1998ರ ಅಕ್ಟೋಬರ್‌ನಲ್ಲಿ ರಾಜಸ್ಥಾನದ ಜೋಧಪುರ ಸಮೀಪದ ಹಳ್ಳಿಯಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ದೋಷಿ ಎಂದು ನ್ಯಾಯಾಲಯ ಹೇಳಿತ್ತು. ಅಲ್ಲದೆ, ವನ್ಯಮೃಗ ಸಂರಕ್ಷಣೆ ಕಾಯ್ದೆಯ 9/51ನೇ ಸೆಕ್ಷನ್ ಅಡಿಯಲ್ಲಿ ಐದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿತ್ತು.
ಸದ್ಯ ಸಲ್ಮಾನ್ ಅವರನ್ನು ಜೋಧಪುರ ಕೇಂದ್ರೀಯ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಸಲ್ಮಾನ್ ಖಾನ್ ಅವರು ನಿನ್ನೆಯೇ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶ ರವೀಂದ್ರ ಕುಮಾರ್ ಜೋಷಿ, ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಮತ್ತೆ ಒಂದು ದಿನ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.
Salman Khan, blackbuck poaching case ,adjourned,bail hearing