ಬೆಂಗಳೂರು, ಏ.7- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಲವು ನಿರ್ದಿಷ್ಟ ಕ್ಷೇತ್ರಗಳಲ್ಲಿ ಜನತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ನಮ್ಮವರು ಸ್ಪರ್ಧಿಸದೆ ಇರುವ ಕ್ಷೇತ್ರಗಳಲ್ಲಿ ಪಕ್ಷೇತರರನ್ನು ಬೆಂಬಲಿಸುತ್ತೇವೆ ಎಂದು ಜನತಾ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಎಂ.ಎಫ್.ಸಲೀಂ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದೇಶದ ರಾಜಕೀಯ ವಿದ್ಯಮಾನಗಳು ಆತಂಕಕಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಸಮಸ್ಯೆಗಳ ಕುರಿತು ಪರಿಣಾಮಕಾರಿಯಾಗಿ ಸ್ಪಂದಿಸಲು ವಿವಿಧ ರಾಜಕೀಯ ಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಆದರೆ, ನಮ್ಮ ಪಕ್ಷ ಜನರ ಸಮಸ್ಯೆಗಳಿಗೆ ಸ್ಪಂದಿಸಿ ನೆರವಾಗುವುದೆ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವದ ಪರಿಕಲ್ಪನೆ ನಮ್ಮ ದೇಶದ ಅತ್ಯಂತ ಹೆಮ್ಮೆಯ ವಿಷಯಗಳಲ್ಲಿ ಪ್ರಮುಖವಾದುದು. ದೇಶದ ಪ್ರತಿಯೊಬ್ಬ ಪ್ರಜೆಯೂ ಅಭಿಪ್ರಾಯಕ್ಕೆ ಮನ್ನಣೆ ಸಿಕ್ಕಾಗ ಮಾತ್ರ ಸಂವಿಧಾನದ ಮೂಲ ಆಶಯ ಈಡೇರಲು ಸಾಧ್ಯ ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸದ ಕ್ಷೇತ್ರಗಳಲ್ಲಿ ಪಕ್ಷೇತರರು ಮತ್ತು ಬೇರೆ ಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಸಲೀಂ ತಿಳಿಸಿದರು.