ಬೆಂಗಳೂರು, ಏ.7-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ನಾಳೆ ಬೆಳಿಗ್ಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಡಿ.ಕೆ.ಶಿವಕುಮಾರ್, ದಿನೇಶ್‍ಗುಂಡೂರಾವ್ ಸೇರಿದಂತೆ ಅನೇಕ ಮುಖಂಡರೊಂದಿಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿರುವ ರಾಹುಲ್‍ಗಾಂಧಿಯವರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ.
ರಾಹುಲ್‍ಗಾಂಧಿ ರಾಜ್ಯದಲ್ಲಿ ನಡೆಸಿದ ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಶ್ರೀಗಳು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳು, ಕನಕ ಶ್ರೀಗಳು ಸೇರಿದಂತೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು.
ನಾಳೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಮಾತುಕತೆ ನಡೆಸಿ ಅವರ ಆಶೀರ್ವಾದ ಪಡೆಯಲಿದ್ದಾರೆ.
ರಾಹುಲ್ ಅವರ ಟೆಂಪಲ್ ರನ್, ಮಠಗಳ ಭೇಟಿ ಚುನಾವಣಾ ಸಂದರ್ಭದಲ್ಲಿ ವಿಶೇಷತೆ ಪಡೆದುಕೊಂಡಿದೆ.
ಜನಾಶೀರ್ವಾದ ಯಾತ್ರೆ ಎಲ್ಲೆಡೆ ಯಶಸ್ವಿಯಾಗಿದ್ದು, ದೇವಾಲಯಗಳ ಭೇಟಿ, ಮಠ- ಮಂದಿರ ಭೇಟಿಗೂ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಾಳೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ನಂತರ ಅಶೋಕ ಹೊಟೇಲ್‍ನಲ್ಲಿ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಏಟ್ರಿಯಾ ಹೊಟೇಲ್‍ನಲ್ಲಿ ಸಂವಾದ, ಜ್ಞಾನಜ್ಯೋತಿ ಸಭಾಂಗಣದಲ್ಲಿ ಪಾಲ್ಗೊಳ್ಳಲಿರುವ ಅವರು, ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಜನಾಶೀರ್ವಾದ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ದೆಹಲಿಗೆ ಹಿಂದಿರುಗಲಿದ್ದಾರೆ.