ನವದೆಹಲಿ:ಏ-9: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ನೀಡಲಾಗಿದ್ದ ತೀರ್ಪನ್ನು ಅನುಷ್ಠಾನಕ್ಕೆ ತರಲು ಮೇ.3ರೊಳಗೆ ಕರಡು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಮತ್ತಷ್ಟು ಕಾಲಾವಕಾಶ ನೀಡಬೇಕೆಂದು ಕೋರಿ ಈ ಹಿಂದೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಬಳಿ ಮನವಿ ಮಾಡಿಕೊಂಡಿತ್ತು. ಇದರಂತೆ ತಮಿಳುನಾಡು ಸರ್ಕಾರ ಕೂಡ ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದರೆ ಕುರಿತು ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ಮೇ.3ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕರಡು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೆ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನೀಡುವವರೆಗೂ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಶಾಂತಿ ಕಾಪಾಡಬೇಕೆಂದು ಸೂಚಿಸಿದೆ.
6 ವಾರಗಳೊಳಗೆ ಕರಡು ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದರೂ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ತಮಿಳುನಾಡು ರಾಜ್ಯದ ಸಂಕಷ್ಟ ಅರ್ಥವಾಗುತ್ತದೆ. ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಲಯ ಹೇಳಿದೆ. ಅಲ್ಲದೆ, ಕೇಂದ್ರ ತುರ್ತು ಕ್ರಮ ಕೈಗೊಳ್ಳದ ಕುರಿತಂತೆಯೂ ಅಸಮಾಧಾನ ವ್ಯಕ್ತಪಡಿಸಿದ್ದು, ನೀವು ಯೋಜನೆಯನ್ನು ಸಿದ್ಧಪಡಿಸಲೇಬೇಕು. ಇದರಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರಕ್ಕೆ ತಾಕೀತು ಮಾಡಿದೆ.
ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಕರಡು ಪ್ರತಿ ಸಲ್ಲಿಸಲಿರುವ ಕೇಂದ್ರ ಸರ್ಕಾರ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಿಗೆ ಕಾವೇರಿ ನದಿ ನೀರನ್ನು ಹೇಗೆ ಹಂಚಿಕೆ ಮಾಡಲಾಗುತ್ತದೆ ಎಂಬುದರ ಕುರಿತು ವಿವರಣೆ ನೀಡಬೇಕಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮುಂದಿನ ನಡೆ ಸಾಕಷ್ಟು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
Supreme Court Rebukes Centre,Implement Our Order, On Cauvery Water