ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ : ಶೋಭಾ ಕರಂದ್ಲಾಜೆ

ತುಮಕೂರು, ಏ.10- ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ. ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ. ಯಾರಿಗೇ ನೋವಾದರೂ ಅವರ ಜತೆ ಪಕ್ಷ ಇದ್ದೇ ಇರುತ್ತದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಗಂಗಸಂದ್ರದಲ್ಲಿ ನಡೆದ ಮುಷ್ಠಿಧಾನ್ಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಚಾರದಲ್ಲಿ ಕೆಲ ಆಕಾಂಕ್ಷಿಗಳಿಗೆ ನೋವಾಗಿದೆ. ಕ್ಷೇತ್ರಗಳ ಸರ್ವೆ ಮಾಡಿ ಗೆಲ್ಲುವ ಕುದುರೆಗಳಿಗೆ ಟಿಕೆಟ್ ನೀಡಲಾಗುತ್ತಿದೆ. ಈಗಾಗಲೇ ಎಲ್ಲ ಕ್ಷೇತ್ರಗಳಲ್ಲೂ ಸಮೀಕ್ಷೆ ಮಾಡಿದ್ದೇವೆ. ಜನವಿರೋಧಿ, ಹಿಂದೂ ವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕು. ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಬೇಸರ ಮಾಡಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಅವಕಾಶ ಸಿಗುತ್ತದೆ ಎಂದರು.

ಚುನಾವಣಾ ಆಯೋಗದ ಅಧಿಕಾರಿಗಳು ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ಉಡುಪಿ ಮತ್ತು ಬಾಗಲಕೋಟೆಯಲ್ಲಿ ಕೇಸರಿ ಬಣ್ಣ ಹಾಗೂ ಪಕ್ಷದ ಚಿಹ್ನೆ ಕಂಡರೆ ಕಪ್ಪು ಬಣ್ಣ ಬಳಿದು ರಾಷ್ಟ್ರೀಯ ಪಕ್ಷಕ್ಕೆ ಅವಮಾನ ಮಾಡುವ ರೀತಿಯಲ್ಲಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮೂರು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಯಿಂದ ಹಿಂದೆ ಸರಿಯುವಂತಾಗಿದೆ. ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಎಲ್ಲ ಸಮಸ್ಯೆಗಳೂ ಬಗೆಹರಿಯಲಿವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ