ನವದೆಹಲಿ, ಏ.10- ಕಾಂಗ್ರೆಸ್ ಟಿಕೆಟ್ ಆಯ್ಕೆ ಕಸರತ್ತು ಮುಂದುವರಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಇಂದು ಬೆಳಗಾವಿ, ಮೈಸೂರು, ಕಂದಾಯ ವಿಭಾಗ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿತು.
ಕಲಬುರಗಿ, ಬೆಂಗಳೂರು ಕಂದಾಯ ವಿಭಾಗ ವ್ಯಾಪ್ತಿಯ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಸಿ ಒಮ್ಮತಕ್ಕೆ ಬರಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪಕ್ಷದ ಉಸ್ತುವಾರಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಗಂಭೀರ ಚರ್ಚೆ ನಡೆಸಿದರು. ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಬಂದ ಬಂಡಾಯ ಶಾಸಕರಿಗೆ ಹಾಗೂ ಬಿಜೆಪಿಯಿಂದ ಬಂದ ಇಬ್ಬರು ಶಾಸಕರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ.
ಏಪ್ರಿಲ್ 13ರಂದು ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ. ಇಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ವಾಪಸಾಗಲಿದ್ದು, 13ಕ್ಕೆ ಮತ್ತೆ ನವದೆಹಲಿಗೆ ತೆರಳಲಿದ್ದಾರೆ. ಏ.18ಕ್ಕೆ ಫೈನಲ್ ಪಟ್ಟಿ ಪ್ರಕಟಗೊಳ್ಳಲಿದೆ. ಬಹುತೇಕ ಆಕಾಂಕ್ಷಿಗಳು ನವದೆಹಲಿಯಲ್ಲಿ ಬೀಡುಬಿಟ್ಟು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.
ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ದೆಹಲಿ ನಿವಾಸದಲ್ಲಿ ಅಲ್ಪಸಂಖ್ಯಾತ ಮುಖಂಡರೊಂದಿಗೂ ಕೂಡ ಮಹತ್ವದ ಸಭೆ ನಡೆಸಿದರು. ಒಟ್ಟಾರೆ ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಬಂಡಾಯವಾಗದಂತೆ ಅಭ್ಯರ್ಥಿಗಳ ಆಯ್ಕೆ ನಡೆಸಲಿದ್ದಾರೆ.