ಬೆಂಗಳೂರು, ಏ.10-ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಅಧಿಕಾರಿಗಳೇ ನಕಲಿ ಗುರುತಿನ ಚೀಟಿ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಕಲಿ ಗುರುತಿನ ಚೀಟಿ ಮಾಡಿಕೊಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ದಾಸರಹಳ್ಳಿ ಬಿಬಿಎಂಪಿ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿದರು.
ಪ್ರತಿಭಟನಾಕಾರರನ್ನು ತಡೆಯಲು ಪೆÇಲೀಸರು ಬಂದರೂ ಸಾಧ್ಯವಾಗಲಿಲ್ಲ. ಪ್ರತಿಭಟನಾಕರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ದಾಸರಹಳ್ಳಿ ಸುತ್ತಮುತ್ತ ಹಲವಾರು ಕಾಲೇಜುಗಳಿವೆ. ಇಲ್ಲಿ ಹೊರ ರಾಜ್ಯಗಳ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹೊರರಾಜ್ಯಗಳ ವಿದ್ಯಾರ್ಥಿಗಳನ್ನು ಮತದಾರರಪಟ್ಟಿಗೆ ಸೇರಿಸಿ ನಕಲಿ ಗುರುತಿನ ಚೀಟಿ ಮಾಡಿಕೊಡಲಾಗುತ್ತಿದೆ. ಇದನ್ನು ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಯಕರ್ತರು ದೂರಿದರು.
ಈ ಅಕ್ರಮದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರಿದ ಪ್ರತಿಭಟನಾಕಾರರು, ನಕಲಿ ಮತದಾರರ ಎಲ್ಲ ಹೆಸರನ್ನು ಕೈಬಿಡಬೇಕೆಂದು ಆಗ್ರಹಿಸಿದರು. ನ್ಯಾಯಸಮ್ಮತ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದರು.