
ಬೆಂಗಳೂರು,ಏ.10- ಮಡಿವಾಳ ಸಮಾಜಕ್ಕೆ ಮೂರು ಪಕ್ಷಗಳಿಂದ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಅಖಿಲ ಭಾರತೀಯ ರಜಕ (ಮಡಿವಾಳ) ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಜೆ.ಎಂಜೇರಪ್ಪ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 70 ವರ್ಷಗಳಿಂತಲೂ ನಮ್ಮ ಸಮಾಜಕ್ಕೆ ರಾಷ್ಟ್ರೀಯ ಪಕ್ಷಗಳು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದಿಲ್ಲ. ಆದ್ದರಿಂದ ಈ ಬಾರಿ ಟಿಕೆಟ್ ನೀಡಬೇಕೆಂದು ಮನವಿ ಮಾಡಲಾಗಿದೆ. ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಮಡಿವಾಳ ಮಹಾಸಭಾ ರಾಜ್ಯಾಧ್ಯಕ್ಷ ಗೋಪಿಕೃಷ್ಣ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.
2013ರ ಚುನಾವಣೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು 1,263 ಮತಗಳಿಂದ ಪರಾಭವಗೊಂಡಿದ್ದರು. ಬೇಲೂರು ವಿಧಾನಸಭಾ ಕ್ಷೇತ್ರದಿಂದ ಬೇಲೂರು ಲಕ್ಷ್ಮಣ್.ಇ.ಎಚ್ ಅವರಿಗೂ ಕೂಡ ಬಿಜೆಪಿಯಿಂದ ಟಿಕೆಟ್ ನೀಡಬೇಕೆಂದು ಕೋರಿದರು.
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 34 ಸಾವಿರ ಮಡಿವಾಳ ಸಮಾಜದ ಮತಗಳಿದ್ದು, ಕಾಂಗ್ರೆಸ್ ಪಕ್ಷದಿಂದ ರಾಜು ತಲ್ಲೂರು ಅವರಿಗೆ ಟಿಕೆಟ್ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸತೀಶ್ ಸಾಲಿಯಾನ್‍ರವರು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್, ಬಿಎಸ್‍ಪಿ ಅಭ್ಯರ್ಥಿಯಾಗಿ ಸ್ಪರ್ಧಾ ಆಕಾಂಕ್ಷಿಯಾಗಿದ್ದಾರೆ ಎಂದರು.