ನವದೆಹಲಿ, ಏ.10- ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರಮುಖವಾಗಿ ರಾಜಸ್ತಾನ ಮತ್ತು ಮಧ್ಯ ಪ್ರದೇಶದಲ್ಲಿ ಭಾರತ್ ಬಂದ್ ತೀವ್ರತೆ ಪಡೆದಿದೆ. ಜೈಪುರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜೈಪುರ ಮತ್ತು ಭೋಪಾಲ್ ನಲ್ಲಿ ಮೊಬೈಲ್ ಇಂಟರ್‍ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಪ್ರಹಾರ ದಳ, ಅಶ್ರುವಾಯು ದಳ ಮತ್ತು ಜಲಫಿರಂಗಿ ದಳಗಳನ್ನು ನಿಯೋಜನೆ ಮಾಡಲಾಗಿದೆ.
ಇಂದಿನ ಭಾರತ್ ಬಂದ್‍ಅನ್ನು ನೇರವಾಗಿ ಯಾವುದೇ ಸಂಘಟನೆ ಕರೆ ನೀಡಿಲ್ಲವಾದರೂ, ಸಾಮಾಜಿಕ ಜಾಲತಾಣಗಳಲ್ಲಿ ಭಾರತ್ ಬಂದ್‍ಗೆ ಕರೆ ನೀಡಲಾಗಿದೆ. ಹೀಗಿದ್ದೂ ಬಂದ್‍ಗೆ ರಾಜಸ್ತಾನ ಮತ್ತು ಮಧ್ಯ ಪ್ರದೇಶದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಮಧ್ಯ ಪ್ರದೇಶದ ಚಂಬಲ್ ಕಣಿವೆ, ಭಿಂಡ್ ಪ್ರದೇಶಗಳಲ್ಲಿ ಇಂದು ರಾತ್ರಿ 9ರಿಂದ ನಾಳೆ ಸಂಜೆ ಆರು ಗಂಟೆವರೆಗೂ ಕಫ್ರ್ಯೂ ಹೇರಲು ನಿರ್ಧರಿಸಲಾಗಿದೆ. ಈಗಾಗಲೇ ಏ.2ರಂದು ಭಿಂಡ್ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪೆÇಲೀಸರು ಈ ಕ್ರಮ ಕೈಗೊಂಡಿದ್ದಾರೆ.
ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ಭಾರತ್ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‍ನಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತಿದೆ.